ಬೆಂಗಳೂರು: ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ, ಶಾಸಕರು, ವಿಧಾನಪರಿಷತ್ ಸದಸ್ಯರು, ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಕಾವೇರಿ ನೀರು, ಬರ ನಿರ್ವಹಣೆಗಳಲ್ಲಿ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಬಿಜೆಪಿ ಪ್ರತಿಭಟನೆ ಹಿನ್ನೆಲೆ ಮೈಸೂರು ಬ್ಯಾಂಕ್ ವೃತ್ತದ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಿಜೆಪಿ ನಾಯಕರ ವಶ: ರಸ್ತೆ ತಡೆ ಮಾಡಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋಪಾಲಯ್ಯ ಮತ್ತಿತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಇದಕ್ಕೂ ಮುನ್ನ ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಖಜಾನೆ ಖಾಲಿ ಮಾಡಿದ್ರು. ತಮಿಳುನಾಡಿಗೆ ನೀರು ಕೊಟ್ಟು ಡಿಎಂಕೆ ಪಕ್ಷದ ಹಿತ ಕಾಯ್ತಿದ್ದಾರೆ ವಿನಹ, ಡೋಂಘಿ ರಾಜಕಾರಣ ಮಾಡ್ಕೊಂಡು ರಾಜ್ಯದ ಹಿತ ಕಾದಿಲ್ಲ. ಸ್ವಾತಂತ್ರ್ಯ ಬಂದ ನಂತರ ಇಂತಹ ಕೆಟ್ಟ ಸರ್ಕಾರ, ಭ್ರಷ್ಟ ಸರ್ಕಾರವನ್ನು ಎಲ್ಲಿಯೂ ನೋಡಿಲ್ಲ ಎಂದು ಕಿಡಿಕಾರಿದರು.
ಕಲ್ಲಿದ್ದಲು ಕಳಪೆ ಬಗ್ಗೆ ಕೇಂದ್ರಕ್ಕೆ ಗಮನಕ್ಕೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಹೇಳಿದ್ದಾರೆ. ಇವರು ಕಲ್ಲಿದ್ದಲು ಉತ್ಪಾದನೆ ಮಾಡುವತ್ತ ಗಮನ ಕೊಡಬೇಕಿತ್ತು. ಇಂತಹ ಬೇಜವಾಬ್ದಾರಿ ಸರ್ಕಾರ ರಾಜ್ಯದಲ್ಲಿ ಇದೆ. ಇಂಡಿಯಾ ಪಾಟ್ನರ್ ಹಿತರಕ್ಷಣೆಗಾಗಿ ಇವ್ರು ನೀರು ಬಿಟ್ಟಿರೋದು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸರ್ಕಾರ ಸಮ್ಮಿಶ್ರ ಸರ್ಕಾರದಂತಾಗಿದೆ. ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಬರ ಪರಿಹಾರದಲ್ಲಿ ಸರ್ಕಾರ ವಿಫಲ ಆಗಿದೆ. ಕಾವೇರಿ ಕೊಳ್ಳದ ಜನರು ನೀರಿಗಾಗಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಕೂಡಲೇ ತಮಿಳುನಾಡಿಗೆ ಹರಿಸುವ ನೀರನ್ನು ನಿಲ್ಲಿಸಿ, ಸುಪ್ರೀಂಕೋರ್ಟ್ಗೆ ನೀರಿನ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಸಂಸದ ಪಿ.ಸಿ. ಮೋಹನ್ ಮಾತನಾಡಿ, ಕಾವೇರಿ ನೀರು ಬಿಟ್ಟು ಸರ್ವಪಕ್ಷ ಸಭೆ ಕರೆಯುತ್ತಾರೆ. ಇಂಡಿಯಾ ಮೈತ್ರಿಕೂಟ ರಕ್ಷಣೆಗೆ ಇದೆಲ್ಲ ಮಾಡ್ತಿದಾರೆ. ಈಗಾಗಲೇ 39 ಟಿಎಂಸಿ ನೀರು ಬಿಟ್ಟಿದ್ದಾರೆ. ಖಾಲಿ ಕೊಡ ಹಿಡಿದು ಕುಳಿತಿದ್ದೀವಿ. ಇವರ ಬ್ರ್ಯಾಂಡ್ ಬೆಂಗಳೂರು, ಜಲಸಂಪನ್ಮೂಲ ಇಲಾಖೆಗೆ ಬೇರೆ ಸಚಿವರನ್ನು ನೇಮಿಸಿ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಕಾವೇರಿ ಬಿಕ್ಕಟ್ಟು: ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದೊಂದೇ ಮಾರ್ಗ - ಮಾಜಿ ಸಿಎಂ ಯಡಿಯೂರಪ್ಪ