ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಆರೋಪಕ್ಕೆ ಸಿಲುಕಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನದ ಭೀತಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಿಸಿಬಿ ಪೊಲೀಸರು ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಪೊಲೀಸರು ಬಂಧಿಸದಂತೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮೇಯರ್ ಸಂಪತ್ ರಾಜ್ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಗೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಲಿಖಿತ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಅರ್ಜಿಯಲ್ಲಿ ಆರೋಪಿ ಸಂಪತ್ ರಾಜ್ ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿರುವುದಕ್ಕೆ ಸಾಕಷ್ಟು ಸಾಕ್ಷ್ಯ ಲಭ್ಯವಾಗಿದೆ. ಹೀಗಾಗಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದ್ದಾರೆ.
ಅಲ್ಲದೇ, ಸಂಪತ್ ರಾಜ್ ಸಹಾಯಕರಾದ ಅರುಣ್ ಹಾಗೂ ಸಂತೋಷ್ ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದುಕೊಂಡು ಕೃತ್ಯ ಎಸಗಲು ಇತರೆ ಆರೋಪಿಗಳಿಗೆ ಪ್ರೇರೇಪಿಸಿದ್ದಾರೆ. ಈ ಇಬ್ಬರೊಂದಿಗೆ ಸಂಪತ್ ರಾಜ್ ಸುದೀರ್ಘ ಸಂಭಾಷಣೆ ನಡೆಸಿದ್ದಾರೆ. 12 ಮಂದಿ ಆರೋಪಿಗಳು ಇವರ ವಿರುದ್ಧ ಹೇಳಿಕೆ ನೀಡಿದ್ದಾರೆ. ಮುಖ್ಯವಾಗಿ ಓರ್ವ ಜನಪ್ರತಿನಿಧಿಯಾಗಿರುವ ಸಂಪತ್ ರಾಜ್ ಕಳೆದ ನಾಲ್ಕು ವಾರಗಳಿಂದ ಪೊಲೀಸರ ತನಿಖೆಗೆ ಸಹಕರಿಸದೆ, ತಲೆ ಮರೆಸಿಕೊಂಡಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಆಕ್ಷೇಪಣೆ ದಾಖಲಿಸಿಕೊಂಡಿರುವ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿದೆ. ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ಎಫ್ಐಆರ್ನಲ್ಲೂ ಹೆಸರಿಲ್ಲ. ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಪ್ರಕರಣದಲ್ಲಿ ದಾಖಲಿಸಿಕೊಂಡಿದ್ದು ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದಾರೆ.