ಬೆಂಗಳೂರು: ಐಪಿಎಲ್ ಮ್ಯಾಚ್ ಎಂಜಾಯ್ ಮಾಡುವುದರ ಜೊತೆಗೆ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಭಾವೇಶ್ ಜೈನ್, ಅರವಿಂದ್ ಜೈನ್, ವಿಮಲ್ ಜೈನ್ ಬಂಧಿತ ಆರೋಪಿಗಳು. ಡೆಲ್ಲಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಧಿನಗರ ಬಳಿ ಇರುವ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಂದ ಮೊಬೈಲ್ ಫೋನ್ ಮುಖಾಂತರ ಬೆಟ್ಟಿಂಗ್ ಆಡುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಟ್ಟಿಂಗ್ ಆಡುವ ವ್ಯಕ್ತಿಗಳಿಂದ ಹಣ ಸಂಗ್ರಹಿಸುವ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನ ಬಂಧಿಸಿ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಉಪ್ಪಾರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇತರೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.