ಬೆಂಗಳೂರು: ರಾಜ್ಯದಲ್ಲಿರುವ 20ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ನೆರವು ಪಡೆಯುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ರವೀಂದ್ರ ಶ್ರೀಕಂಠಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರವಾಸಿ ತಾಣಗಳ ಅಭಿವೃದ್ದಿಗೆ ಸಂಬಂಧಪಟ್ಟಂತೆ ಬಂಡವಾಳ ಹೂಡಿಕೆ ಮಾಡಲು ಮುಖ್ಯಮಂತ್ರಿ ನೇತೃತ್ವದಲ್ಲಿ ಶೀಘ್ರವೇ ಸಮಾವೇಶ ಆಯೋಜನೆ ಮಾಡಲಾಗುವುದು. ಶ್ರೀರಂಗಪಟ್ಟಣ ಕೋಟೆ ಮತ್ತು ಕಟ್ಟಡ 5,200 ಮೀಟರ್ ಉದ್ದ ಇದೆ. ಅದರ ಅಭಿವೃದ್ದಿಗೆ ಒಟ್ಟು 94 ಕೋಟಿ ರೂ.ಗಳ ಅಗತ್ಯವಿದೆ. ಈಗ 6 ಕಾಮಗಾರಿಗಳಿಗೆ 18.97 ಕೋಟಿ ಅನುಮೋದನೆ ನೀಡಿದ್ದು, 10.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಪ್ರವಾಸಿ ಹೂಡಿಕೆದಾರರ ಸಮಾವೇಶ: ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಹೂಡಿಕೆದಾರರ ಸಮಾವೇಶ ಕರೆಯಲು ಉದ್ದೇಶಿಸಲಾಗಿದೆ ಎಂದು ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಎಚ್.ಕೆ. ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ಕೈಗಾರಿಕೆಗಳ ಸಿ ಎಸ್ ಆರ್ ನಿಧಿ ಹಣ ಬಳಕೆ ಹಾಗೂ ಉದ್ಯಮಿಗಳು ಪ್ರವಾಸಿ ತಾಣಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಸಕಲೇಶಪುರದ ಮಂಜಿರಬಾದ್ ಕೋಟೆ ಕೇಂದ್ರ ಪುರಾತತ್ವ ಇಲಾಖೆಗೆ ಒಳಪಟ್ಟಿದ್ದು, ಮೂಲ ಸೌಲಭ್ಯ ಕಲ್ಪಿಸಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಹಾಸನ ಜಿಲ್ಲೆ ವಿಶ್ವ ಪ್ರವಾಸಿ ತಾಣವಾಗಿ ಗುರುತಿಸಲಾಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.