ಬೆಂಗಳೂರು: ಕಳಸಾ ಬಂಡೂರಿ ನಾಲಾ ಪ್ರಥಮ ಹಂತದ ಯೋಜನೆಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ರಾಜ್ಯ ಜಲ ಸಂಪನ್ಮೂಲ ಇಲಾಖೆಗೆ ಪತ್ರ ಮುಖೇನ ಸೂಚನೆ ನೀಡಿದೆ.
2014 ರಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದ್ದು, ಅದರ ಪ್ರಕಾರ ಹೊಸ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯುವಂತೆ, ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೆ, ಇತ್ತ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರದ ಪತ್ರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಜಲಸಂಪನ್ಮೂಲ ಇಲಾಖೆಯ ಮನವಿಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆ ತ್ವರಿತವಾಗಿ ಸ್ಪಂದಿಸಿದೆ ಎಂದು ವ್ಯಾಖ್ಯಾನಿಸಿದ್ದಾರೆ.
ಯೋಜನೆ ಅನುಮತಿ ಹಿನ್ನೆಲೆ ಏನು?: ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹದಾಯಿ ನೀರನ್ನು ಆಶ್ರಯಿಸಿದ ಕಳಸಾ – ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಪರಿಸರ ಇಲಾಖೆಯ ತಕರಾರು ಇಲ್ಲ ಎಂದು ಹೇಳಿತ್ತು. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಪರಿಸರ ಪರಿಣಾಮ ಅಧ್ಯಯನ ಅಧಿ ಸೂಚನೆ – 2006ರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಹೀಗಾಗಿ ಯೋಜನೆ ಅನುಷ್ಠಾನಕ್ಕೆ ತಕರಾರು ಇಲ್ಲ ಎಂದು ಹೇಳಿತ್ತು.
ಜಲವಿದ್ಯುತ್ ಅಥವಾ ನೀರಾವರಿ ಯೋಜನೆ ಹಾಗೂ ಹೊಸ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಹಾಯಿಸುವ ಉದ್ದೇಶವನ್ನು ಈ ಯೋಜನೆ ಒಳ ಗೊಂಡಿಲ್ಲ. ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ಕಾಮಗಾರಿ ಆರಂಭಿಸಲು ಆಕ್ಷೇಪ ಇಲ್ಲ. ಕರ್ನಾಟಕ ಸರ್ಕಾರವು ಈ ಯೋಜನೆ ಅನುಷ್ಠಾನಕ್ಕೆ ಬೇಕಾದ ತಯಾರಿ ಮಾಡಿ ಕೊಳ್ಳಲು ಅಭ್ಯಂತರ ಇಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿತ್ತು. ಆದರೆ, ಇದೀಗ ಮತ್ತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ಯೋಜನೆ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿರುವುದು ರೈತರಲ್ಲಿ ಆತಂಕ ಮೂಡಿಸಿದೆ.