ಬೆಂಗಳೂರು : 2020-21ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಅಂಕಗಳ ಗೊಂದಲ ಸಂಬಂಧಿಸಿದಂತೆ ಎಲ್ಲ ವಿದ್ಯಾರ್ಥಿಗಳಿಗೂ ನೆರವಾಗುವಂತೆ ಸಲಹೆಗಳನ್ನು ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.
ಸಿಇಟಿ ಪರೀಕ್ಷೆಗೆ ಪುನರಾವರ್ತಿತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಅಂಕಗಳನ್ನು ಪರಿಗಣಿಸುವಂತೆ ಏಕ ಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಆರಾಧೆ ಅವರಿದ್ದ ವಿಭಾಗೀಯ ಪೀಠ ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತಹ ಮತ್ತು ಎಲ್ಲರಿಗೂ ನೆರವಾಗುವಂತಹ ಸಲಹೆಗಳನ್ನು ನೀಡಲು ಸೂಚಿಸಿ ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಕೆಲ ಕಾಲ ವಾದ ಮಂಡಿಸಿ, ಕೊರೊನಾ ಕಾರಣದಿಂದ ಪರೀಕ್ಷೆ ನಡೆಸದೆ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ(2020-21 ಸಾಲಿನ)ಉತ್ತಮ ರ್ಯಾಂಕಿಂಗ್ ಬಂದಿದೆ ಎಂದು ವಿವರಿಸಿದರು. ಹಿಂದಿನ ಸಾಲಿನ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಪರಿಗಣಿಸಿದಲ್ಲಿ 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ವಿವರಿಸಿದರು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಬಳಿಕ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ : ಕೊರೊನಾ ಸಾಂಕ್ರಾಮಿಕ ರೋಗ ಆವರಿಸಿದ್ದ ಕಾರಣದಿಂದ 2020-21ನೇ ಸಾಲಿನಲ್ಲಿ ಪಿಯುಸಿ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳನ್ನು 2021-22ನೇ ಸಾಲಿನ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಟಿಪ್ಪಣಿ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಈಶ್ವರ್.ಆರ್. ಸೇರಿ ಮತ್ತಿತರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಕೆಇಎ ಟಿಪ್ಪಣಿಯನ್ನು ರದ್ದುಪಡಿಸಿತ್ತು.
ಅಲ್ಲದೆ, ಸಿಇಟಿ ರಿಪೀಟರ್ಸ್ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಡೆದ ಶೇ.50 ರಷ್ಟು ಅಂಕ ಮತ್ತು ಸಿಇಟಿ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇ.50 ರಷ್ಟು ಅಂಕಗಳನ್ನು ಪರಿಗಣಿಸಿ ಸಿಇಟಿ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸುವಂತೆ ಕೆಇಎಗೆ ಹೈಕೋರ್ಟ್ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಇಎ ಮೇಲ್ಮನವಿ ಸಲ್ಲಿಸಿದೆ.
ಇದನ್ನೂ ಓದಿ : ಸಿಇಟಿ ಬಿಕ್ಕಟ್ಟು: ಸರ್ಕಾರದ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್