ಬೆಂಗಳೂರು : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15 ರಂದು ಬೆಳಗ್ಗೆ 09 ಗಂಟೆಗೆ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಣಿಕ್ ಷಾ ಮೈದಾನದ ಒಳಗಡೆ ಮತ್ತು ಸುತ್ತಮುತ್ತ ಕೆಲವು ಕಡೆ ಸಂಚಾರದಲ್ಲಿ ಮಾರ್ಪಾಡು ಮಾಡಿದ್ದಾರೆ. ಈ ಕುರಿತಾದ ವಿವರ ಇಂತಿದೆ.
ಕಾರು ಪಾಸ್‌ಗಳನ್ನು ಹೊಂದಿರುವ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ಸೂಚಿಸಿರುವ ಗೇಟ್ ಬಳಿ ಇಳಿದುಕೊಂಡು, ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ. ತುರ್ತು ಸೇವಾ ವಾಹನಗಳಾದ ಆಂಬ್ಯುಲೆನ್ಸ್, ಅಗ್ನಿಶಾಮಕ ದಳ, ನೀರಿನ ಟ್ಯಾಂಕರ್, ಕೆಎಸ್ಆರ್ಪಿ, ಬಿಬಿಎಂಪಿ ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ 2ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ, ನಂತರ ಫೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದು. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 3 ರ ಮೂಲಕ ಒಳ ಪ್ರವೇಶಿಸಿ, ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ನಿಲುಗಡೆ ಮಾಡಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಸ್ವಾತಂತ್ರ್ಯ ದಿನಾಚರಣೆ : ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ
ಸಂಚಾರ ಮಾರ್ಪಾಡು ವಿವರ : ಆಗಸ್ಟ್ 15 ರಂದು ಬೆಳಗ್ಗೆ 8 ಗಂಟೆಯಿಂದ 11ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್. ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಇನ್ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿ ರಸ್ತೆ - ಸಫೀನಾ ಫ್ಲಾಜಾ - ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ - ಆಲೀಸ್ ಸರ್ಕಲ್ - ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ಕಬ್ಬನ್ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಜಂಕನ್‌ಂದ ಬಿ.ಆರ್.ವಿ ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಪರ್ಯಾಯವಾಗಿ ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.
ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟೀಟ್‌ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು ಇನ್ಫ್ಯಾಂಟ್ರಿ ರಸ್ತೆ - ಸಫೀನಾ ಪ್ಲಾಜಾ - ಎಡಕ್ಕೆ ತಿರುವು ಪಡೆದು ಮೈನ್ ಗಾರ್ಡ್ ರಸ್ತೆ - ಅಲಿ ಸರ್ಕಲ್ - ಡಿಸ್ಪೆನ್ಸರಿ ರಸ್ತೆ - ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ - ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ಭದ್ರತಾ ದೃಷ್ಟಿಯಿಂದ ಪರೇಡ್ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮರಾ, ರೇಡಿಯೋ, ಛತ್ರಿ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ಆಹ್ವಾನಿತರು ಬೆಳಗ್ಗೆ 8 ಗಂಟೆಯೊಳಗೆ ಮೈದಾನದಲ್ಲಿ ಆಸೀನರಾಗುವಂತೆ ತಿಳಿಸಲಾಗಿದೆ.
ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು : ಸೆಂಟ್ರಲ್ ಸ್ಟ್ರೀಟ್ - ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಹಾಗೂ ಕಬ್ಬನ್ ರಸ್ತೆ - ಸಿ.ಟಿ.ಒ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ ಮತ್ತು ಎಂ.ಜಿ.ರಸ್ತೆ - ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ. ಅಲ್ಲದೇ, ಪರೇಡ್ ವೀಕ್ಷಣೆಗೆ ಆಗಮಿಸುವವರಿಗೆ ಸೆಲ್ಫಿ ಮುಂತಾದ ಮೊಬೈಲ್ ಬಳಕೆಗೆ ನಿರ್ಬಂಧವಿರುವುದನ್ನ ಗಮನದಲ್ಲಿರಿಸಿಕೊಳ್ಳಲು ಕೋರಲಾಗಿದೆ.