ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಮೂರನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಅಭಿನವ ಹಾಲಶ್ರೀ ಅವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಆರು ಜನ ಆರೋಪಿಗಳ ಬಂಧನವಾಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದರು. ತಲೆಮರೆಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿ ಮೈಸೂರಿನಿಂದ ಒಡಿಶಾಗೆ ವಿವಿಧ ಮಾರ್ಗಗಳಲ್ಲಿ ತೆರಳಿ, ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾದ ಕಟಕ್ ಬಳಿ ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಉದ್ಯಮಿಗೆ ವಂಚಿಸಿದ ಆರೋಪದಡಿ ಚೈತ್ರಾ ಕುಂದಾಪುರ, ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರುವ ವೇಳೆ, ಮಾಧ್ಯಮಗಳತ್ತ ನೋಡಿದ್ದ ಆರೋಪಿ ಚೈತ್ರಾ 'ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಎಲ್ಲಾ ಸತ್ಯ ಹೊರಗಡೆ ಬರಲಿದೆ. ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ. ಹಾಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ' ಎಂದು ಆರೋಪಿಸಿದ್ದರು.
ಸದ್ಯ ಅಭಿನವ ಹಾಲಶ್ರೀ ಸ್ವಾಮೀಜಿಯ ಬಂಧನವಾಗಿದ್ದು, ಇಂದು ಮಧ್ಯರಾತ್ರಿ ವೇಳೆಗೆ ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ. ವಿಚಾರಣೆಯ ಬಳಿಕ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರಾ? ಅಥವಾ ತನಿಖಾಧಿಕಾರಿಗಳ ದಿಕ್ಕು ತಪ್ಪಿಸಲು ಚೈತ್ರಾ ಸುಳ್ಳು ಹೇಳಿದ್ದಾರಾ? ಎಂಬ ಸಂಗತಿ ಬಯಲಾಗಲಿದೆ.
ಗುರುಪುರ ವಜ್ರದೇಹಿ ಸ್ವಾಮೀಜಿ ಸ್ಪಷ್ಟನೆ : ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆ (ಸೆಪ್ಟೆಂಬರ್ 18-2023) ನೀಡಿದ್ದರು. ಜೊತೆಗೆ ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದೆ. ಆದ್ದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ "ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ ಫೋನ್ ಮಾಡಿ ಈ ಪ್ರಕರಣದಲ್ಲಿ ನಿಮ್ಮ ಹೆಸರು ಇದೆ. ಗೋವಿಂದ ಬಾಬು ಪೂಜಾರಿ ಅವರು ನಿಮಗೆ ಒಂದೂವರೆ ಕೋಟಿ ನೀಡಿದ್ದಾರೆ ಎಂದು ಕೇಳಿಬರುತ್ತಿದೆ. ನೀವು ಆ ಹಣವನ್ನು ವಾಪಸ್ ನೀಡಿ ಎಂದು ಹೇಳಿದ್ದರು". ಆಗ ನಾನು ಉತ್ತರಿಸಿ, "ಈ ಪ್ರಕರಣದಲ್ಲಿ ನಾನಿಲ್ಲ ಎಂದು ಆಕ್ರೋಶವಾಗಿ ಹೇಳಿದ್ದು ಆ ಬಳಿಕ ಫೋನ್ ಕಟ್ ಮಾಡಿದ್ದರು.
ಆನಂತರ ಈ ವಿಚಾರದಲ್ಲಿ ನಾನು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಮತ್ತು ಬಜರಂಗದಳದ ಮುಖಂಡರಿಗೆ ಫೋನ್ ಮಾಡಿ ಈ ಬಗ್ಗೆ ವಿಚಾರಿಸಿದ್ದೇವೆ. ಆಗ ಅವರು ಈ ಬಗ್ಗೆ ನಿಮಗೆ ಗೊತ್ತಿಲ್ಲದಿದ್ದರೆ ಕೋಪ ಮಾಡಿಕೊಳ್ಳುವುದು ಬೇಡ ಎಂದು ಸಮಾಧಾನಪಡಿಸಿದ್ದರು. ಇದಾದ ಬಳಿಕ ಮತ್ತೆ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿ ನಾನು ತಪ್ಪಿ ನಿಮ್ಮ ಹೆಸರು ಹೇಳಿದ್ದೇನೆ. ಅದು ಅಭಿನವ ಸ್ವಾಮೀಜಿ ಎಂದು ಗೊತ್ತಾಗಿದೆ ಎಂದು ಮಾತನಾಡಿದರು" ಎಂದಿದ್ದರು.
ಇದನ್ನೂ ಓದಿ: "ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ನಾನಿಲ್ಲ": ಗುರುಪುರ ವಜ್ರದೇಹಿ ಸ್ವಾಮೀಜಿ ಸ್ಪಷ್ಟನೆ