ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ, ಮುದ್ದಹನುಮೇಗೌಡ ಮತ್ತು ಸಚಿವ ವೆಂಕಟರಮಣಪ್ಪ ಭೇಟಿ ನೀಡಿ ಮಾತುಕತೆ ನಡೆಸಿದ್ದರು.
ಸಿಎಂ ವಿರುದ್ಧ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಮುದ್ದಹನುಮೇಗೌಡ ಮತ್ತು ಸಚಿವ ವೆಂಕಟರಮಣಪ್ಪ ಅವರಿಂದಲೂ ಮಾತುಕತೆ ನಡೆಯಿತು.
ಲೋಕಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಗೌಡ ಬದಲು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ದ ಚೆಲುವರಾಯಸ್ವಾಮಿ, ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಗುರಿಯಾಗಿದ್ದರು.
ಇನ್ನೊಂದೆಡೆ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ, ತುಮಕೂರು ಸಂಸದ ಮುದ್ದಹನುಮೇಗೌಡ ಕೂಡ ಚುನಾವಣಾ ಚಟುವಟಿಕೆಯಿಂದ ದೂರ ಉಳಿದಿದ್ದರು. ಇದು ತುಮಕೂರಿನ ಮೈತ್ರಿ ಅಭ್ಯರ್ಥಿ ದೇವೇಗೌಡರಿಗೆ ಇರಿಸುಮುರುಸು ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರನ್ನು ಕರೆಸಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.