ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ನಾಳೆ ಸಂಜೆ 6 ಗಂಟೆಗೆ ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಪಕ್ಷದ ಎಲ್ಲಾ ಶಾಸಕರು ಹಾಜರಿರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬಿಜೆಪಿಯ ಕೆಲ ಶಾಸಕರೂ ಕಾಂಗ್ರೆಸ್ ಪರ ಇರುವುದಾಗಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆಯುವುದು ಮತ್ತು ಸದನದಲ್ಲಿ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿದ್ದು, ಸರ್ಕಾರದ ಪರ ನಿಲ್ಲಬೇಕು ಎಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೂಚನೆ ನೀಡಲಿದ್ದಾರೆ.
ಈ ಹಿಂದೆ ಇಂತಹ ಸನ್ನಿವೇಶವನ್ನು ಎದುರಿಸಿಯೇ ಮೈತ್ರಿ ಸರ್ಕಾರ ಪತನಗೊಂಡಿದ್ದರಿಂದ ಈ ಅವಿಶ್ವಾಸ ನಿರ್ಣಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರವಾಗಿ ಪರಿಗಣಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಸಾಧ್ಯತೆ ನಡೆಯದಂತೆ ನೋಡಿಕೊಳ್ಳಲು ತಂತ್ರ ಹೆಣೆಯಲು ಸಿಎಂ ಮುಂದಾಗಿದ್ದಾರೆ ಎನ್ನಲಾಗಿದೆ.