ಬೆಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಹಾಗು ಉದ್ಯಮಿ ವಿಕ್ರಮ್ ಕಿರ್ಲೋಸ್ಕರ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕುಂಬ್ಳೆ ಸುಂದರ್‌ರಾವ್ ಅವರಿಗೆ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿ, ಕುಂಬಳೆ ಸುಂದರ್ ರಾಯರು ಬಿಜೆಪಿಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಕುಟುಂಬ, ಬಂಧುವರ್ಗ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ತಿಳಿಸಿದ್ದಾರೆ.
ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ನಿಧನಕ್ಕೆ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ. ಅಕಾಲಿಕ ನಿಧನ ಆಘಾತ ತಂದಿದೆ. ಅವರ ಆತ್ಮಕೆ ಶಾಂತಿ ಸಿಗಲಿ. ದು:ಖ ಭರಿಸುವ ಶಕ್ತಿಯನ್ನು ದೇವರು, ಕುಟುಂಬ ವರ್ಗ ಮತ್ತು ಸ್ನೇಹಿತರಿಗೆ ನೀಡಲಿ ಎಂದು ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ