ಬೆಂಗಳೂರು : ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿಯುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಿಸಿದರು.
ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಯು ಟಿ ಖಾದರ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಖಾದರ್ ಅವರು ಸಭಾಧ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ, ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ ಎಂದರಲ್ಲದೇ ಹೊಸದಾಗಿ ಆರಿಸಿ ಬಂದ ಸದಸ್ಯರಿಗೆ ಅಭಿನಂದಿಸಿದರು. ಇದೇ ವೇಳೆ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿಯೂ ತಿಳಿಸಿದರು.
ಉತ್ಸಾಹಿ, ಸಕ್ರೀಯ ರಾಜಕಾರಣಿ : ರಾಜಕಾರಣದ ಕುಟುಂಬದಿಂದ ಬಂದಿರುವ ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದವರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರ್ ಅವರು, ಶಾಸಕರು ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2012 ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಸದನವೀರ ಪ್ರಶಸ್ತಿಯೂ ಅವರಿಗೆ ದೊರೆತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಯು ಟಿ ಖಾದರ್ ಅವರು ಮಾದರಿ ಶಾಸಕರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಉಪವಿರೋಧಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು. ಜಾತ್ಯತೀತ ಮನೋಭಾವ ಉಳ್ಳವರು ಎಂದರು.
ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ : ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬ ನಿರೀಕ್ಷೆಯನ್ನು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆಯಲ್ಲಿ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಮಾಡಬೇಕಿದೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಇಲ್ಲಿ ಏಳು ಕೋಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು. ಈ ಎಲ್ಲಾ ವಿಚಾರಗಳು ಸದನದಲ್ಲಿ ಚರ್ಚೆಯಾಗಬೇಕು. ಸದನದ ಅಧ್ಯಕ್ಷರ ಸ್ಥಾನಕ್ಕೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ.
ಸದನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ. ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಚರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಅವಕಾಶ ಹಾಗೂ ಹಕ್ಕುಗಳಿವೆ ಎಂದರು.
ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕ. ವಿಧಾನಸಭೆಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ಇರಬೇಕು. ಕಾನೂನು ಸುವ್ಯವಸ್ಥೆ ಇಲ್ಲದಿದ್ದರೆ ಬಂಡವಾಳ ಹೂಡಿಕೆಯಾಗುವುದಿಲ್ಲ. ಬಂಡವಾಳ ಹೂಡಿಕೆಯಾಗದಿದ್ದರೆ, ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉದ್ಯೋಗ ಸೃಷ್ಟಿಯಾಗದಿದ್ದರೆ ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ರಾಜ್ಯದ ಅಭಿವೃದ್ಧಿ, ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಆದ್ದರಿಂದ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕವಾಗಿದೆ ಎಂದರು.
ಇದನ್ನೂ ಓದಿ: 'ನಿಮ್ಮ ತಕ್ಕಡಿ ಸಮವಾಗಿರಲಿ': ನೂತನ ಸ್ಪೀಕರ್ಗೆ ಮಾಜಿ ಸಿಎಂ ಬೊಮ್ಮಾಯಿ ಸಲಹೆ