ಬೆಂಗಳೂರು: ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ.
ರಾಜ್ಯದಲ್ಲಿ ಬಾಲನ್ಯಾಯ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪ್ರಕರಣದ ತನಿಖಾಧಿಕಾರಿ ಡಾ. ಗಣ ಪಿ. ಕುಮಾರ್ ಅವರು ಮಾಹಿತಿ ಹಾಗೂ ದಾಖಲೆಗಳನ್ನು ಕೋರಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯಕ್ಕೆ 2020ರ ಮೇ. 29ರಂದು ಪತ್ರ ಬರೆದಿದ್ದರು. ಆದರೆ ಕೇಂದ್ರ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ತಿಳಿಸಿದರು.
ಈ ವಿಚಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸಚಿವಾಲಯ ತಕ್ಷಣವೇ ತನಿಖಾಧಿಕಾರಿ ಕೋರಿರುವ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸಬೇಕು. ತನಿಖೆಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಬೇಕು. ಈ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಪ್ರಮಾಣಪತ್ರ ಸಲ್ಲಿಸಬೇಕು ಎಂದು ತಾಕೀತು ಮಾಡಿತು.
ಇದೇ ವೇಳೆ ಪ್ರಕರಣದ ತನಿಖೆ ಪ್ರಗತಿ ವರದಿಯನ್ನು ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಅಕ್ಟೋಬರ್ 1ಕ್ಕೆ ಮುಂದೂಡಿತು. ಹಾಗೆಯೇ, ತನಿಖಾಧಿಕಾರಿಗಳು ಸೆಪ್ಟೆಂಬರ್ 30ರೊಳಗೆ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ನಿರ್ದೇಶಿಸಿತು.