ಬೆಂಗಳೂರು: ನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವುದು, ಆಟಿಕೆ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿ 2021 ರಿಂದ ಈವರೆಗೆ 115 ಮಂದಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 99 ಮಂದಿ ಮಕ್ಕಳನ್ನು ಸಂರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ನಗರದ ರಸ್ತೆಗಳಲ್ಲಿ ಮಕ್ಕಳನ್ನು ಭಿಕ್ಷಾಟನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಸಂಬಂಧ ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ಧೀಕ್ಷಿತ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರವಾಗಿ ಡಿಎಸ್‌ಪಿ ಯೋಗೆಂದ್ರ ಕುಮಾರ್ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಅಲ್ಲದೇ ಭಿಕ್ಷಾಟನೆ ಮಾಡುತ್ತಿದ್ದ 37 ಪುರುಷರು,74 ಮಹಿಳೆಯರು, 54 ಗಂಡು ಮಕ್ಕಳು ಹಾಗೂ 45 ಹೆಣ್ಣು ಮಕ್ಕಳು ಸೇರಿ ಒಟ್ಟು 210 ಮಂದಿಯನ್ನು ಸಂರಕ್ಷಣೆ ಮಾಡಲಾಗಿದೆ. ಜತೆಗೆ 115 ಎಫ್‌ಐಆರ್‌ಗಳನ್ನು ದಾಖಲಿಸಿ 82 ಪುರುಷರು ಹಾಗೂ 62 ಮಹಿಳೆಯರು ಸೇರಿ 144 ಮಂದಿಯನ್ನು ಬಂಧಿಸಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಿದ್ದಾರೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂರಕ್ಷಣೆ ಹೆಸರಿನಲ್ಲಿ ಸಣ್ಣ ಮಕ್ಕಳನ್ನು ವಶಕ್ಕೆ ಪಡೆದಿದ್ದು, ಅಂತಹ ಮಕ್ಕಳು ತನ್ನ ತಾಯಿಯಿಂದ ದೂರಾಗುವ ಸಾಧ್ಯತೆಯಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು ಸಣ್ಣ ಮಕ್ಕಳನ್ನು ತಾಯಿಯೊಂದಿಗೆ ಇರುವುದಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಈ ವೇಳೆ ನ್ಯಾಯಪೀಠ, ಎದೆಹಾಲು ಕುಡಿಯುವಂತಹ ಸಣ್ಣ ಮಕ್ಕಳನ್ನು ತಾಯಿಯಿಂದ ದೂರವಾಗದಂತೆ ನೋಡಿಕೊಳ್ಳಬೇಕು. ಜತೆಗೆ, ಹಾಲುಣಿಸುವ ತಾಯಿ ಮತ್ತು ಮಕ್ಕಳನ್ನು ಮಕ್ಕಳ ಗೃಹಕ್ಕೆ ಸ್ಥಳಾಂತರ ಮಾಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.
ಇದೇ ಕೊನೆಯ ಕಾಲಾವಕಾಶ ಇದೇ ವೇಳೆ ಬಿಬಿಎಂಪಿ ಪರ ವಕೀಲರು, ಭಿಕ್ಷುಕರ ಸಂರಕ್ಷಣೆಗಾಗಿ ಬಿಬಿಎಂಪಿಯಿಂದ ಸಂಗ್ರಹಿಸಿರುವ ಭಿಕ್ಷುಕರ ಸೆಸ್‌ನ ಬಾಕಿಯಿರುವ 55.65 ಕೋಟಿ ರೂ.ಗಳನ್ನು ಕೇಂದ್ರ ಪರಿಹಾರ ಸಮಿತಿಗೆ ಮುಂದಿನ ಆರು ತಿಂಗಳಲ್ಲಿ ಮೂರು ಕಂತುಗಳಲ್ಲಿ ಪಾವತಿ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪದ ನ್ಯಾಯಪೀಠ, ಮುಂದಿನ ನಾಲ್ಕು ತಿಂಗಳಲ್ಲಿ ಎಲ್ಲ ಬಾಕಿ ಮೊತ್ತವನ್ನು ಕೇಂದ್ರ ಪರಿಹಾರ ಸಮಿತಿಗೆ ಪಾವತಿ ಮಾಡಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ ಅರ್ಜಿಯ ವಿಚಾರಣೆಯನ್ನು ನಾಲ್ಕು ವಾರಗಳಿಗೆ ಮುಂದೂಡಿ ಆದೇಶಿಸಿತು.
ಅರ್ಜಿದಾರರ ಮನವಿ ಏನು? ಬೆಂಗಳೂರಿನ ಬೀದಿಗಳಲ್ಲಿ ಅದರಲ್ಲೂ ಪ್ರಮುಖವಾಗಿ ಸಿಗ್ನಲ್‌ಗಳಲ್ಲಿ ಪೆನ್ ಆಟಿಕೆಗಳು ಇಯರ್ ಬಡ್ ಮತ್ತಿತರ ವಸ್ತುಗಳನ್ನು ಮಾರಾಟ ಮಾಡಲು ಹಾಗೂ ಭಿಕ್ಷಾಟನೆಗೆ ಚಿಕ್ಕ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ. ಇದು ಬಾಲನ್ಯಾಯ ಕಾಯ್ದೆ ಹಾಗೂ ಸಂವಿಧಾನದ 21ನೇ ಪರಿಚ್ಛೇದದ ಉಲ್ಲಂಘನೆಯಾಗಿದೆ. ಆದ್ದರಿಂದ ಮಕ್ಕಳನ್ನು ಮಾರಾಟ ಮಾಡುವ ಕೆಲಸಕ್ಕೆ ಬಳಸಿಕೊಳ್ಳದಂತೆ ಹಾಗೂ ಅವರನ್ನು ಶಾಲೆಗಳಿಗೆ ದಾಖಲಿಸಲು ಅಗತ್ಯ ಕ್ರಮ ಜರುಗಿಸುವಂತೆ ಸರ್ಕಾರ, ಬಿಬಿಎಂಪಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸಬೇಕೆಂದು ಲೆಟ್ಜ್ ಕಿಟ್ ಫೌಂಡೇಷನ್ ಅರ್ಜಿದಾರರು ಕೋರಿದ್ದರು.
ಇದನ್ನೂಓದಿ: ಆಕ್ಷೇಪಾರ್ಹ ಟ್ವೀಟ್ ತೆಗೆದಿರುವ ಕುರಿತ ಆರೋಪಕ್ಕೆ ತನ್ನ ನಿಲುವು ತಿಳಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ