ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆಗಿರುವ ಸಾರ್ವಜನಿಕ ಆಸ್ತಿ ನಷ್ಟವನ್ನು ಅಂದಾಜು ಮಾಡಿ ವಸೂಲಿ ಮಾಡಲು ಹಾಗೂ ನಷ್ಟ ಅನುಭವಿಸಿದವರಿಗೆ ಪರಿಹಾರ ದೊರಕಿಸಲು "ಕ್ಲೇಮ್ ಕಮಿಷನರ್" ನೇಮಕ ಮಾಡಲು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ತುರ್ತು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 25ಕ್ಕೆ ನಿಗದಿಪಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಪರ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್, ಸುಪ್ರೀಂ ಕೋರ್ಟ್ ನಿರ್ದೇಶನಗಳ ಅನ್ವಯ ಈ ಹಿಂದೆ ಡಿಕೆಶಿ ಪರ ಪ್ರತಿಭಟನೆ ಪ್ರಕರಣದಲ್ಲಿ ಹೈಕೋರ್ಟ್ ಹೊರಡಿಸಿದ್ದ ಆದೇಶ ಮತ್ತು ಕೆಲ ದಾಖಲೆಗಳನ್ನು ಸಲ್ಲಿಸಿದರು.
ಕೆಲಕಾಲ ಎ.ಜಿ ವಾದ ಆಲಿಸಿದ ಪೀಠ, ಇದೇ ವಿಚಾರವಾಗಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ಕಾರದ ಅರ್ಜಿಯೊಂದಿಗೆ ಸೇರಿಸುವಂತೆ ರಿಜಿಸ್ಟ್ರಾರ್ ಅವರಿಗೆ ಸೂಚಿಸಿ, ವಿಚಾರಣೆಯನ್ನು ಆ.25ಕ್ಕೆ ಮುಂದೂಡಿತು.