ಬೆಂಗಳೂರು: ಆತ್ಮಹತ್ಯೆಗೆ ಶರಣಾದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಆರ್ ನಾಗೇಂದ್ರ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ನಾಗೇಂದ್ರ ಅವರ ನಿಧನದ ವಿಷಯ ಕೇಳಿ ಅತೀವ ದುಃಖವಾಗಿದ್ದು, ಈ ಬಗ್ಗೆ ವಿಷಾದಿಸುತ್ತೇನೆ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 30 ಲಕ್ಷ ರೂ. ಪರಿಹಾರ ಹಣವನ್ನು ಮಂಜೂರು ಮಾಡಲಾಗುವುದು ಹಾಗೂ ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.