ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ದರ ನಿಗದಿಗೆ ಪೂರಕವಾಗಿ ರಾಜ್ಯದಲ್ಲಿ ಬೆಲೆ ನಷ್ಟದ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( cm bommai) ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಬೆಂಬಲ ಬೆಲೆ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಬೆಲೆ ನಿಗದಿಗೂ ಮೊದಲು ರಾಜ್ಯದಲ್ಲಿ ಬೆಲೆ ನಷ್ಟದ ವರದಿ ಹಾಗೂ ಎಂಎಸ್ಪಿ ದರ ನಿಗದಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಸಿಗುವ ನೆರವಿನ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ವರದಿ ಬಂದ ಬಳಿಕ ಎಂಎಸ್ಪಿ ದರ ನಿಗದಿ ಮಾಡಲು ಆಲೋಚಿಸುವುದಾಗಿ ಸಿಎಂ ಹೇಳಿದ್ದಾರೆ.
ಮುಂದಿನ ವಾರ ಮತ್ತೊಂದು ಸಭೆ ಕರೆಯಲು ನಿರ್ಧಾರ ಕೈಗೊಂಡ ಸಿಎಂ ಬಸವರಾಜ ಬೊಮ್ಮಾಯಿ, ಎಮ್ಎಸ್ಪಿ ದರ ನಿಗದಿಯಿಂದ ರಾಜ್ಯದ ಬೊಕ್ಕಸಕ್ಕೆ ತಗಲುವ ಹಣಕಾಸಿನ ಹೊರೆ ಬಗ್ಗೆ ಆರ್ಥಿಕ ಇಲಾಖೆಯಿಂದ ಮಾಹಿತಿ ಕೇಳಿದ್ದಾರೆ. ಭತ್ತ, ರಾಗಿ, ಜೋಳಕ್ಕೆ ಸರ್ಕಾರದಿಂದ ಕನಿಷ್ಠ ಬೆಂಬಲ ಬೆಲೆ ನೀಡಲು ಸಿಎಂ ಆಸಕ್ತಿ ತೋರಿಸುತ್ತಿದ್ದಾರೆ.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಸಚಿವರಾದ ಡಾ: ಕೆ.ಸುಧಾಕರ್, ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.