ಬೆಂಗಳೂರು/ನವದೆಹಲಿ: ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ ದೆಹಲಿಗೆ ಬಂದಿದ್ದೇನೆ, ಈ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತ ಮಾತುಕತೆ ಸಾಧ್ಯತೆ ಕಡಿಮೆ ಇದೆ. ಸದ್ಯ ಕೇಂದ್ರದ ಯಾವುದೇ ಸಚಿವರನ್ನೂ ಭೇಟಿಯಾಗಿಲ್ಲ. ಈ ಪ್ರವಾಸದ ವೇಳೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆ ಬಿಬಿಎಂಪಿಯು 23 ಕೋಟಿ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ್ದ ರಸ್ತೆಗಳು ಹಾಳಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅದು ನನ್ನ ಗಮನಕ್ಕೆ ಬಂದಿಲ್ಲ. ಯಾವ ರಸ್ತೆಗಳು ಆ ರೀತಿ ಹಾಳಾಗಿವೆ ಎನ್ನುವ ಮಾಹಿತಿ ನೀಡಿದರೆ ಅವುಗಳ ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದರು.
ಕತ್ತಿ ಹೇಳಿಕೆ ಇದೇ ಮೊದಲಲ್ಲ, ರಾಜ್ಯ ವಿಭಜನೆ ಪ್ರಸ್ತಾವವಿಲ್ಲ: 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ರಚನೆಯಾಗಲಿದ್ದು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಆದರೆ ಈ ರೀತಿ ಅವರು ಹೇಳುತ್ತಿರುವುದು ಇದೇ ಮೊದಲೇನಲ್ಲ. ಹತ್ತು ಹಲವಾರು ವರ್ಷದಿಂದ ಈ ರೀತಿ ಹೇಳುತ್ತಿದ್ದಾರೆ. ಹಾಗಾಗಿ ಅವರ ಪ್ರತ್ಯೇಕ ರಾಜ್ಯ ಹೇಳಿಕೆಗೆ ಅವರೇ ಉತ್ತರ ಕೊಡಬೇಕು. ಸರ್ಕಾರದ ಮಟ್ಟದಲ್ಲಿ ಆ ರೀತಿಯ ಯಾವುದೇ ಚಿಂತನೆ ಇಲ್ಲ. ವಿಚಾರವೂ ಇಲ್ಲ, ಪ್ರಸ್ತಾವವೂ ಇಲ್ಲ ಎಂದರು.
ಬೇಜವಾಬ್ದಾರಿ ಹೇಳಿಕೆ ನೀಡಿರುವ ಕತ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿರುವ ಸಿದ್ದರಾಮಯ್ಯ ಬೇಡಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕತ್ತಿ ಹಲವಾರು ಬಾರಿ ಈ ರೀತಿ ಹೇಳಿದ್ದಾರೆ ಎನ್ನುತ್ತ ಯಾವುದೇ ಕ್ರಮ ಕೈಗೊಳ್ಳಲ್ಲ ಎನ್ನುವುದನ್ನು ಪರೋಕ್ಷವಾಗಿ ತಿಳಿಸಿ ಸ್ಥಳದಿಂದ ನಿರ್ಗಮಿಸಿದರು.
ಇದನ್ನೂ ಓದಿ: ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತ ಬಂದ ಸರ್ಕಾರವೂ ಉಳಿಯುವುದು ಡೌಟ್: ಹೆಚ್‌ಡಿಕೆ