ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆದ ನಂತರ ಅವರು ನಾಲ್ಕನೇ ಬಾರಿಗೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಅಕ್ಟೋಬರ್ 8ರಂದು ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸಕ್ಕೆ ನಿರ್ಧರಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಅರುಣ್ ಸಿಂಗ್ ಸಮಯ ಲಭ್ಯವಾಗಿದ್ದು, ಜೆ.ಪಿ. ನಡ್ಡಾ ಭೇಟಿಗೆ ಸಮಯ ನಿಗದಿಯಾಗಬೇಕಿದೆ.
ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಈಗಾಗಲೇ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿರುವ ಸಿಎಂ ಬೊಮ್ಮಾಯಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯೊಂದಿಗೆ ನವದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ನಡೆಯುತ್ತಿರುವ ಮೊದಲ ಉಪ ಚುನಾವಣೆ ಇದಾಗಿದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ:
ಅಕ್ಟೋಬರ್ 3ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಹೆಸರುಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಹೈಕಮಾಂಡ್ಗೆ ನೀಡಬೇಕಾದ ಹೆಸರುಗಳ ಪಟ್ಟಿ ಅಂತಿಮಗೊಳಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುತ್ತದೆ. ಅಕ್ಟೋಬರ್ 8ರಂದು ಸಿಎಂ ದೆಹಲಿಗೆ ತೆರಳಲಿದ್ದು, ಅಲ್ಲಿ ಅಭ್ಯರ್ಥಿಗಳ ಕುರಿತು ನೇರವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ವಿವಿಧ ಕೇಂದ್ರ ಸಚಿವರ ಭೇಟಿ ಮಾಡಲಿರುವ ಸಿಎಂ, ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿ, ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಕೇಂದ್ರದಿಂದ ಬರಬೇಕಾಗಿರುವ ಬಾಕಿ ಅನುದಾನದ ಕುರಿತು ಹಣಕಾಸು ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ: ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ವಶಕ್ಕೆ