ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕರಾವಳಿ, ಕೊಡಗು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ತೀವ್ರ ಹಾನಿಗೊಳಾಗಿರುವ ನಾಲ್ಕು ಜಿಲ್ಲೆಗಳಿಗೆ ನಾಳೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ವಿತರಣೆಗೆ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್‌ಟಿ ನಗರ ಖಾಸಗಿ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ, ಮನೆಗಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.
ನಾಳೆಯಿಂದ ಎರಡು ದಿನಗಳ ಕಾಲ 4 ಜಿಲ್ಲೆಗಳಿಗೆ ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಸ್ವೀಕರಿಸಲಾಗುವುದು. ನಾಳೆ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಉಡುಪಿಯಲ್ಲಿ ವಾಸ್ತವ್ಯ ಹೂಡಿ, ನಾಡಿದ್ದು ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಪರಿಶೀಲನೆ ಮಾಡುತ್ತೇನೆ. ಈಗಾಗಲೇ ಮಳೆ ಹಾನಿ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಬೆಳಗಾವಿ: ನಿರಂತರ ಮಳೆಗೆ ಶಾಲೆಗಳ ಗೋಡೆ ಕುಸಿತ; ನದಿ ಪಾತ್ರದ ಜನರಿಗೆ ಎಚ್ಚರಿಕೆ