ಬೆಂಗಳೂರು: ಕರ್ನಾಟಕ ಗಡಿ ಗ್ರಾಮಗಳ ಜನರಿಗೆ ವಿಮೆ ನೀಡುವ ಆದೇಶ ಮಹಾರಾಷ್ಟ್ರದ ಉದ್ದಟತನದ ಪರಮಾವಧಿಯಾಗಿದ್ದು ಕೂಡಲೇ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ನಮ್ಮ ಮನವಿ ಕಡೆಗಣಿಸಿ ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ನಿರ್ಧಾರ ಖಂಡಿಸಿ ಸಿಎಂ ಟ್ವೀಟ್: ಮಹಾರಾಷ್ಟ್ರದ ನಿರ್ಧಾರ ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥಶಿಂಧೆ ಹಾಗು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌರವ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದಿದ್ದಾರೆ.
ಗಡಿ ಜನರಿಗೆ ಮಹಾರಾಷ್ಟ ವಿಮೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ.. ಈ ಬಗ್ಗೆ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದು, ಕನ್ನಡಿಗರ ತೀವ್ರ ವಿರೋಧದ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದಿಂದ ಕೂಡಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೇ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಹಳ್ಳಿಗೆ ವಿಮೆ ಮಾಡಿಸುತ್ತಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದಿಂದ ಕೂಡಿದೆ: ಸಿದ್ದರಾಮಯ್ಯ ಆಕ್ರೋಶ