ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಸಂಜೆ 4.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ಕರೆದಿರುವ ಯಡಿಯೂರಪ್ಪ, ಕಡತಗಳ ಪರಿಶೀಲನೆ ನಡೆಸಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ್ದ ನೆರೆಹಾನಿಗೆ ಪರಿಹಾರ ಬಿಡುಗಡೆ ಹಾಗೂ ಬೆಂಗಳೂರಿನಲ್ಲಿ ಮಳೆಯಿಂದ ಆದ ಹಾನಿಗೆ ಪರಿಹಾರ ಕೊಟ್ಟಿರುವ ಬಗ್ಗೆ ಕಡತ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.
ಉತ್ತರ ಕರ್ನಾಟಕದಲ್ಲಿ ನೆರೆಹಾನಿ ಸಂಭವಿಸುತ್ತಿದ್ದಂತೆ ಪರಿಹಾರ ಕಾರ್ಯಾಚರಣೆಗೆ ಸೂಚನೆ ನೀಡಿದ್ದ ಸಿಎಂ ಯಡಿಯೂರಪ್ಪ, ವೈಮಾನಿಕ ಸಮೀಕ್ಷೆ ನಡೆಸಿ ಹಾನಿ ವೀಕ್ಷಣೆ ಮಾಡಿದ್ದರು. ಸಬಂಧಪಟ್ಟ ಜಿಲ್ಲಾಡಳಿತದ ಜೊತೆ ಸಭೆ ನಡೆಸಿ ಹಾನಿ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲು ಸಲಹೆ ಸೂಚನೆ ನೀಡಿದ್ದರು. ನಂತರ ಬೆಂಗಳೂರಿನಲ್ಲಿ ಸಂಭವಿಸಿದ ಮಳೆಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದರು. ಈ ಎಲ್ಲವುಗಳ ಕುರಿತು ಸಿಎಂ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.