ಬೆಂಗಳೂರು: ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯದ ಜನಸಂಖ್ಯೆ ಗಣನೀಯವಾಗಿದ್ದು, ಕಾಡುಗೊಲ್ಲ ಸಮುದಾಯದ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ನಿಗಮ ಸ್ಥಾಪಿಸುವ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ಶಿರಾ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಯಾವಾಗ ಬೇಕಾದರೂ ಉಪಚುನಾವಣೆ ಘೋಷಣೆಯಾಗಬಹುದು. ಈ ಕ್ಷೇತ್ರದಲ್ಲಿ 154 ಗೊಲ್ಲರ ಹಟ್ಟಿಗಳಿದ್ದು, 40 ಸಾವಿರಕ್ಕೂ ಹೆಚ್ಚಿನ ಕಾಡುಗೊಲ್ಲರ ಮತಗಳಿವೆ. ಹಾಗಾಗಿ ಕಾಡುಗೊಲ್ಲರ ಮತಗಳ ಮೇಲೆ ಕಣ್ಣಿಟ್ಟು ಸಮುದಾಯದ ಬಹು ದಿನಗಳ ಬೇಡಿಕೆಯಂತೆ ಕಾಡುಗೊಲ್ಲ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಆದೇಶ ಹೊರಡಿಸಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.