ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಧನೆ ನವಭಾರತ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಮಾನತೆಯ ಸಮಾಜಕ್ಕಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಂತ ಮೂರು ಮಂತ್ರಗಳನ್ನು ಅವರು ಶೋಷಿತರ ವರ್ಗಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಇಂದು ಬೆಳಿಗ್ಗೆ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಆಧುನಿಕ ಭಾರತವನ್ನು ಜಾತಿ ಮತ್ತು ಮೇಲು-ಕೀಳುಗಳಂತ ವ್ಯವಸ್ಥೆಯನ್ನು ಮೀರಿ ಕಟ್ಟುವ ಹಾಗೂ ಮಹಿಳಾ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ ಸಮಾನತೆಯ ಕನಸು ಕಂಡಿದ್ದರು. ಇಂತಹ ಮಹಾನ್ ನಾಯಕನ ಜಯಂತಿಯನ್ನು ಇಂದು ದೇಶದ ಉದ್ದಗಲಕ್ಕೂ ಆಚರಿಸಲಾಗುತ್ತಿದ್ದು, ಮಾನ್ಯ ಪ್ರಧಾನಮಂತ್ರಿಗಳಿಂದ ಹಿಡಿದು ಎಲ್ಲರೂ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್-19 ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.