ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ಪುನರಾರಂಭಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ವೇಗ ನೀಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು, ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಶಾಂತನಗರದ ವಾರ್ಡ್ ನಂ. 104 ರಲ್ಲಿ ನೂತನವಾಗಿ ನಿರ್ಮಿಸಿರುವ 30 ಹಾಸಿಗೆ ಸಾಮರ್ಥ್ಯವುಳ್ಳ ಸುಸಜ್ಜಿತ ಹೆರಿಗೆ ಆಸ್ಪತ್ರೆಯನ್ನು ನಾಳೆ ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ.
ನಂತರ 10.45 ಕ್ಕೆ ಅಗ್ರಹಾರ ದಾಸರಹಳ್ಳಿಯ ವಾರ್ಡ್ ನಂ. 105 ರ ಎಂ.ಸಿ, ಬಡಾವಣೆಯಲ್ಲಿ 200 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಕೊರೊನಾ ಲಾಕ್ಡೌನ್ ಆರಂಭಗೊಂಡ ನಂತರ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಇನ್ಮುಂದೆ ಆಧ್ಯತೆ ನೀಡಲು ಸಿಎಂ ಮುಂದಾಗಿದ್ದಾರೆ.