ಬೆಂಗಳೂರು : ಕೊರೊನಾ ಎರಡನೇ ಅಲೆಯಿಂದ ಮುಂದೂಡಲ್ಪಟ್ಟಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಾಳೆ ನಡೆಯಲಿದೆ. ವರ್ಚುವಲ್ ಮೂಲಕ ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ವರ್ಚುವಲ್ ಮೂಲಕ ಕೋರ್ ಕಮಿಟಿ ಸಭೆ ನಡೆಯಲಿದೆ.
ದೆಹಲಿಯಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಹಾಗೂ ಸದಸ್ಯರು ಅವರಿರುವ ಸ್ಥಳಗಳಿಂದ ವರ್ಚುವಲ್ ಮೂಲಕ ಭಾಗಿಯಾಗಲಿದ್ದು, ಅಧಿಕೃತ ನಿವಾಸ ಕಾವೇರಿಯಲ್ಲಿ ವರ್ಚುವಲ್ ಮೂಲಕ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಪ್ರತಿ ಎರಡು ತಿಂಗಳಿಗೊಮ್ಮೆ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು, ಪಕ್ಷ ಸಂಘಟನೆ, ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯತೆ ಸಾಧಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಪಕ್ಷದಲ್ಲಿನ ಆಂತರಿಕ ಅಸಮಧಾನಕ್ಕೆ ಪರಿಹಾರ ಕಂಡುಕೊಳ್ಳುವುದು, ಮುಂಬರಲಿರುವ ಚುನಾವಣೆ, ಉಪ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ಸೇರಿದಂತೆ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ.
ಇತ್ತೀಚೆಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿ ಮೂರು ದಿನಗಳ ಕಾಲ ಇದ್ದು ಶಾಸಕರು, ಸಚಿವರು, ಪಕ್ಷದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿದ್ದರು. ಪಕ್ಷ ಹಾಗು ಸರ್ಕಾರದ ಭಾಗವಾಗಿರುವ ಸಚಿವರಿಗೆ ಕೆಲವೊಂದು ಸಲಹೆ ಸೂಚನೆ ನೀಡಿದ್ದು, ಅದರ ಪಾಲನೆ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.