ಬೆಂಗಳೂರು: ಮುಂದಿನ ತಿಂಗಳು ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು 12 ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಇಂದು ನಡೆದ ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಹಕಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ, ಪ್ರವಾಸೋದ್ಯಮ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಸುದೀರ್ಘ ಸಮಾಲೋಚನೆ ನಡೆಸಿದರು.
ಹೊಸ ಯೋಜನೆ ಮತ್ತು ಹೆಚ್ಚಿನ ಅನುದಾನ ನೀಡುವಂತೆ ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಹಣಕಾಸು ಪರಿಸ್ಥಿತಿಯನ್ನು ಗಮನಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಇದನ್ನು ಓದಿ: ಮೀಸಲಾತಿಯಲ್ಲಿ ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸಲಾಗುವುದು; ಸಚಿವ ಗೋಪಾಲಯ್ಯ
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಕೆಲವು ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವರು ಸಾಧಕ-ಬಾಧಕಗಳನ್ನು ನೋಡಿ ಮಾಡೋಣ ಎಂದಿದ್ದಾರೆ. ತುಮಕೂರಿಗೆ ಸಂಬಂಧಿಸಿದಂತೆ ಕೆಲವು ಯೋಜನೆಗಳನ್ನು ನೀಡುವಂತೆ ಕೋರಲಾಗಿದೆ. ಕಡಿಮೆ ದುಡ್ಡಿನ ಯೋಜನೆಗಳು ಆಗಬೇಕೆಂದು ಒತ್ತಾಯಿಸಲಾಗಿದೆ ಎಂದರು.
ಹಣಕಾಸಿನ ಲಭ್ಯತೆ ನೋಡಿಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ತುಮಕೂರು ಜಿಲ್ಲೆಗೆ ಹೇಮಾವತಿ ಕಾಲುವೆ ಆಧುನೀಕರಣಕ್ಕೆ ಕೇಳಿದ್ದೇವೆ. ಅಲ್ಲದೆ ತುಮಕೂರು ಆಸ್ಪತ್ರೆಗೆ ವೈದ್ಯಕೀಯ ಕಾಲೇಜು ನೀಡಿ ಸ್ನಾತಕೋತ್ತರ ಪದವಿ ಕೇಂದ್ರ ಮಾಡಿ ಎಂದೂ ಸಹ ಕೇಳಲಾಗಿದೆ. ಅಲ್ಲದೆ ಶಿರಾಗೆ ಕೃಷಿ ಕಾಲೇಜು ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.