ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲು ಹೈಕಮಾಂಡ್ ಭೇಟಿಗೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನವದೆಹಲಿ ಪ್ರವಾಸಕ್ಕೆ ಅಧಿಕೃತ ವೇಳಾಪಟ್ಟಿ ಪ್ರಕಟಗೊಂಡಿದೆ.
ಸೆ. 17ರಂದು ಬೆಳಗ್ಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.
11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 1.20ಕ್ಕೆ ನವದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಂತರ ಹೈಕಮಾಂಡ್ ನಾಯಕರನ್ನು ಸಿಎಂ ಭೇಟಿಯಾಗಲಿದ್ದಾರೆ. ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲಿದ್ದು, ಇದರ ಜೊತೆಯಲ್ಲೇ ರಾಜ್ಯಕ್ಕೆ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.