ಬೆಂಗಳೂರು: ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದಾಗಿ ಸಂಖ್ಯಾಬಲ ಕುಸಿದು ಅಪಾಯಕ್ಕೆ ಸಿಲುಕಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರನೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಶಾಸಕರ ರಾಜೀನಾಮೆಯಿಂದಾಗಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಸಂಪುಟದ ಸಹೋದ್ಯೋಗಿಗಳ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ. ಸಂಪುಟ ಸಭೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವರೆಲ್ಲರ ರಾಜೀನಾಮೆ ಇನ್ನೂ ಅಂಗೀಕಾರವಾಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳ ಸಚಿವರು ಭಾಗವಹಿಸಲಿದ್ದಾರೆ.
ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಉಳಿಸಿಕೊಳ್ಳಲು ಇರುವ ಮಾರ್ಗಗಳು, ಶಾಸಕರ ಮನವೊಲಿಕೆ, ಸಂಖ್ಯಾಬಲ ಕೊರತೆಯಾದರೆ ವಿಶ್ವಾಸ ಮತಯಾಚನೆ, ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಎದುರಿಸುವುದು, ವಿಧಾನಸಭೆ ವಿಸರ್ಜನೆ ಸೇರಿದಂತೆ ಹಲವಾರು ಗಂಭೀರ ಸ್ವರೂಪದ ವಿಷಯಗಳ ಬಗ್ಗೆ ಸಿಎಂ ಕುಮಾರಸ್ವಾಮಿ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಅಲ್ಲದೆ ಶುಕ್ರವಾರದಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಬರಗಾಲ, ಮಳೆ ಕೊರತೆ ಹಾಗೂ ಕೆಲವು ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.