ಬೆಂಗಳೂರು/ ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣ ಕುರಿತು ಮಾತುಕತೆ ನಡೆಸಿದ್ದಾರೆ.
ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ವೇಳೆ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಸಚಿವರಾದ ಬಂಡೆಪ್ಪ ಕಾಶಂಪೂರ ಹಾಗೂ ಸಾ.ರಾ.ಮಹೇಶ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅವರು ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ನಾಯಕರು ಅತ್ಯುತ್ತಮವಾಗಿ ಸಹಕಾರ ನೀಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ, ರಾಹುಲ್ ಗಾಂಧಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಸಿಎಂ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.