ಬೆಂಗಳೂರು: ಪ್ರತಿ ಜಿಲ್ಲೆಯ ಜಿಲ್ಲಾ ವರಿಷ್ಟಾಧಿಕಾರಿಗಳು ಜನರ ಜೊತೆ ಬೆರೆತು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆ ಬಳಿಕ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಎರಡು ಗಂಟೆ ನಡೆದ ಸುದೀರ್ಘ ಸಭೆಯಲ್ಲಿ ಕೇಂದ್ರ ಗೃಹ ಇಲಾಖೆಯಿಂದ ಬಂದಿರುವ ಅಗತ್ಯ ಸಲಹೆ ಸೂಚನೆಗಳನ್ನು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ತಿಳಿಸಿದರು.
ಪ್ರತಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಜನರ ಜೊತೆ ಬೆರೆತು ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೌರತ್ವ ಕಾಯ್ದೆ ಕುರಿತು ಸಾಧ್ಯವಾದ ಮಟ್ಟಿಗೆ ಪೊಲೀಸರೇ ಜನರಲ್ಲಿ ಜಾಗೃತಿ ಮೂಡಿಸಿದರೆ ಉತ್ತಮ ಬೆಳವಣಿಗೆ ಈ ಮೂಲಕ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ತರಬಹುದು ಎಂದು ಹೇಳಿದರು.
ನಾಳೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮಂಗಳೂರಿಗೆ ಹೋಗಿ ಅಲ್ಲಿ ಕೂಡ ಸಭೆ ನಡೆಸುತ್ತೇವೆ. ಬಳಿಕ ಉಡುಪಿಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸುವುದಾಗಿ ತಿಳಿಸಿದರು.