ಬೆಂಗಳೂರು: ದಕ್ಷತೆ, ಸಮಯ ಬದ್ಧತೆಯಿಂದ ಕೆಲಸ ಮಾಡಬೇಕು. ಜಿಲ್ಲಾ ಆಡಳಿತ ಚುರುಕುಗೊಳಿಸಬೇಕು ಹಾಗೂ ಜನಪರವಾಗಿದ್ದು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಸತಿ, ಪಡಿತರ ಹಂಚಿಕೆ, ರಸ್ತೆ, ಶಾಲೆ, ಆಸ್ಪತ್ರೆ ನಿರ್ಮಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನೆಗಳ ಪರಿಶೀಲನೆಯನ್ನು ಸಭೆಯಲ್ಲಿ ನಡೆಸಲಾಗಿದೆ. ದಕ್ಷತೆಯಿಂದ ಸಮಯ ಬದ್ಧವಾಗಿ ಕೆಲಸ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜನರ ಆರೋಗ್ಯ ಶಿಕ್ಷಣ ಮೂಲಭೂತ ಸೌಕರ್ಯ, ಮಾನವ ಅಭಿವೃದ್ಧಿಗೆ ವಿಶೇಷ ಒತ್ತು ಕೊಡಬೇಕು. ಬಜೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ. ಗ್ರಾಮದ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂಬ ಸ್ಪಷ್ಟ ಆದೇಶ ನೀಡಿದ್ದೇನೆ ಎಂದು ಹೇಳಿದರು.
ಆಜಾನ್ ವಿವಾದದ ಬಗ್ಗೆ ಮಾತನಾಡಿದ ಅವರು, ಆಜಾನ್ ವಿಷಯದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಸೌಹಾರ್ದತೆಯಿಂದ ಸುಪ್ರೀಂ ಆದೇಶ ಪಾಲನೆ, ಅನುಷ್ಠಾನ ಆಗಬೇಕು. ನ್ಯಾಯಾಲಯದ ಆದೇಶ ಪಾಲನೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದೇನೆ ಎಂದರು.
ಇದನ್ನೂ ಓದಿ: ಸಿಎಂ, ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು: ಡಿಕೆಶಿ