ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಬಿಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದು, ನೌಕರರ ಸಂಘದ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೌಕರರ ಸಂಘದ ಮುಖಂಡರ ವಿರುದ್ಧ ಸಿಎಂ ಕಿಡಿ :
ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ನಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ, ಮೇಲಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಇವುಗಳಿಗೆ ಸಭೆಯಲ್ಲಿ ಒಪ್ಪಿಗೆ ಸೂಚಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಮಾಧ್ಯಮ ಹೇಳಿಕೆ ಮೂಲಕ ಹೇಳಿದ್ದಾರೆ.
ಓದಿ : ಸಂಧಾನ ವಿಫಲ, ನಾಳೆಯೂ ಕೂಡಾ ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿ ತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ ಎಂದಿರುವ ಸಿಎಂ, ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ಸಂಸ್ಥೆಯ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಂದು ಕೋರಿದ್ದಾರೆ.