ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೆದ್ದಾರಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಸಂಬಂಧಪಟ್ಟ ಯೋಜನೆಗಳ ಪ್ರಗತಿ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಉಪನಗರ ವರ್ತುಲ ರಸ್ತೆ, ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ವೆಚ್ಚದಲ್ಲಿ 2,300 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಯೋಜನೆ, ಸೋಲಾಪುರ-ಕರ್ನೂಲು ಹೆದ್ದಾರಿಗೆ ಭೂಸ್ವಾಧೀನ ಪ್ರಕ್ರಿಯೆ, ಪುಣೆ-ಬೆಂಗಳೂರು ಹೆದ್ದಾರಿಯನ್ನು 6 ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗಳ ಪ್ರಗತಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದುಕೊಂಡರು.
ಯೋಜನೆಗಳಿಗೆ ಇರುವ ಸಮಸ್ಯೆಗಳು, ತೊಡಕುಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಗಳ ಮಹಾನಿರ್ದೇಶಕ ಐ.ಕೆ. ಪಾಂಡೆ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.