ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ 1200 ವಾರ್ಡ್ಗಳಲ್ಲಿ ಮೂರು ದಿನಕ್ಕಿಂತ ಹೆಚ್ಚು ಅವಧಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಿಗೆ 27 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಯಲು, ದುರಸ್ತಿ ಮಾಡಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಂದುವರೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚರಂಡಿ ನೀರಿನ ಪೈಪ್ ಲೈನ್ , ಕುಡಿಯುವ ನೀರಿನ ಪೈಪ್ ಲೈನ್ ನೊಂದಿಗೆ ಸೇರುವ ಕಡೆಗಳಲ್ಲಿ ಪೈಪ್ ಲೈನ್ ಸ್ಥಳಾಂತರ ಗೊಳ್ಳಬೇಕು. ಕಾಂಕ್ರೀಟ್ ರಸ್ತೆಗಳನ್ನು ಹಾಕುವ ಸಂದರ್ಭದಲ್ಲಿ ಯುಜಿಡಿ ಲೈನ್ ಹಾಗೂ ನೀರಿನ ಲೈನ್ ಗಳನ್ನು ಹಾಕುವ ಮುನ್ನ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು ತಿಳಿಸಿದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬೆಳವಣಿಗೆಯಲ್ಲಿ ಇಳಿಕೆಯಾಗಿದೆ. ಕೆಲವು ಜಿಲ್ಲೆಯಲ್ಲಿ ಬೆಳವಣಿಗೆಯ ಪ್ರಮಾಣ ಶೇ 5ಕ್ಕಿಂತ ಕಡಿಮೆ ಇದೆ. ಇದನ್ನು ಸುಧಾರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಆಸ್ತಿ ಮತ್ತು ವಾಣಿಜ್ಯ ಮುಗ್ಗಟ್ಟುಗಳ ತೆರಿಯನ್ನು ಯಾರೂ ಉಳಿಸಿಕೊಳ್ಳುವುದಿಲ್ಲ. ಕಟ್ಟದಿದ್ದವರಿಗೆ ನೋಟೀಸು ಕೊಟ್ಟು ಕಟ್ಟಲು ಕಾಲಮಿತಿ ನಿಗದಿ ಮಾಡಿಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರು ತೆರಿಗೆ ವಸೂಲು ಮಾಡುವಂತೆ ಸೂಚಿಸಿ ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲು ಮುಖ್ಯಮಂತ್ರಿಗಳು ಸೂಚಿಸಿದರು.
ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದನ್ನು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಎಂದು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್ಫಾರ್ಮರ್ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಇಂಧನ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜೆಸ್ಕಾಂ ಮತ್ತು ಹೆಸ್ಕಾಂ ಗಳಲ್ಲಿ ಬಾಕಿ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ಜೇಬಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರ? : ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್ಗೆ ಭೂಮಿ ಒದಗಿಸುವಂತೆ ಎಷ್ಟು ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಸಿಎಂ ಆ ಅರ್ಜಿಗಳನ್ನು ಜೇಬಿನಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರ ಮೊದಲು ಆ ಎಲ್ಲಾ ಅರ್ಜಿಗಳ ಬೇಡಿಕೆ ಪೂರ್ಣಗೊಳಿಸಿ ಎಂದು ಸೂಚಿಸಿದರು.
ಇದನ್ನೂ ಓದಿ: ಹೈಕೋರ್ಟಿಗೆ ನೀಡಿರುವ ಕಾರ್ಯ ಸೂಚಿಯಂತೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸದಿದ್ದರೆ ಶಿಸ್ತುಕ್ರಮ: ತುಷಾರ್ ಗಿರಿನಾಥ್