ಬೆಂಗಳೂರು: ಮುಂದಿನ 25 ವರ್ಷಗಳ ಅವಧಿಯ ವಿಷನ್ ಡಾಕ್ಯುಮೆಂಟ್ ಬಿಡುಗಡೆ ಮಾಡಲಾಗಿದೆ. ಇದರಿಂದ ಮುಂದಿನ ಐದು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿರುವ 'ರಾಷ್ಟ್ರೀಯ ವೈದ್ಯರ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಲಿದ್ದು, ತಂತ್ರಜ್ಞಾನ ಆಧುನಿಕ ಸಾಧನಗಳ ಬಳಕೆ ಹೆಚ್ಚಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ: ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇದರ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೂರು ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕರೊಂದಿಗೆ ಚರ್ಚೆ ನಡೆಸಲಾಗಿದೆ. ಎಲ್ಲ ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗುವುದು. ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುವುದು ಎಂದರು.
ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ನಿರ್ಧಾರ: ಕೋವಿಡ್ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಘಟಕದಲ್ಲಿ 24 ಗಂಟೆ ಕೆಲಸ ಮಾಡಿದ ವೈದ್ಯರು, ಶುಶ್ರೂಷಕಿಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ವೈದ್ಯಕೀಯ ಕಾಲೇಜಿನಲ್ಲಿ ಇಂದು ರಾಜ್ಯ ಮುಂಚೂಣಿಯಲ್ಲಿದೆ. 9 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದಿರುವ ಜಿಲ್ಲೆಗಳಲ್ಲೂ ಖಾಸಗಿ ಸಹಭಾಗಿತ್ವದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ನಿರ್ಧರಿಸಲಾಗಿದೆ. ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ಸವಾಲಾಗಿದೆ. ಇದಕ್ಕಾಗಿ ಪ್ರಧಾನಿಯವರು ಆಯುಷ್ಮಾನ್ ಭಾರತ್ ವಿಮೆ ಯೋಜನೆ ಜಾರಿಗೆ ತಂದಿದ್ದಾರೆ ಎಂದರು.
ವೈದ್ಯಕೀಯ ಸಮೂಹಕ್ಕೆ ಇತಿಹಾಸ ಪುಟ ತೆಗೆದಾಗ, ಹೊಸ ಕಾಣದಿರೋ ವೈರಾಣು, ಬ್ಯಾಕ್ಟೀರಿಯಾ ಜನರಲ್ಲಿ ಹರಡಿದಾಗ ವೈದ್ಯಕೀಯ ಲೋಕಕ್ಕೆ ಸವಾಲಾಗುತ್ತದೆ. ಪ್ರತೀ ಬಾರಿ ಇಂತಹ ಸವಾಲನ್ನು ವೈದ್ಯರು ಯಶಸ್ವಿಯಾಗಿ ಹಿಮ್ಮೆಟ್ಟುತ್ತಾರೆ. ಹೊಸ ಸಂಶೋಧನೆ ಮೂಲಕ ಯಶಸ್ಸು ಕಾಣುತ್ತಾರೆ. ಯಾವುದೇ ಕ್ಷೇತ್ರದಲ್ಲೂ ಅವಿಷ್ಕಾರವಾದರೂ ಅದು ವೈದ್ಯಕೀಯ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಉದಾಹರಣೆಗೆ ರೊಬೋಟಿಕ್ ತಂತ್ರಜ್ಞಾನ ಅತ್ಯಂತ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿದೆ.
ಸೈನ್ಸ್ ಮತ್ತು ಮೆಡಿಕಲ್ ಸೈನ್ಸ್ ಎರಡೂ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಇದೇ ವೇಳೆ ಉತ್ತಮ ಸಾಧನೆ ಮಾಡಿದ ವೈದ್ಯರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಇದನ್ನೂ ಓದಿ: ಅತ್ಯಾಧುನಿಕ ಮೊಬೈಲ್ ಜಾಮರ್ ಬಗ್ಗೆ ಗೃಹ ಸಚಿವರಿಗೆ ಬಿಇಎಲ್ನಿಂದ ಪ್ರಾತ್ಯಕ್ಷಿಕೆ