ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಮುಂಬೈ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಭಾಗದ ಶಾಸಕರ ಜೊತೆ ಸಮಾಲೋಚಿಸುತ್ತಿದ್ದಾರೆ.
ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಮಧ್ಯಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿರುವ ಸಭೆಯಲ್ಲಿ ಮುಂಬೈ ಮತ್ತು ಮಧ್ಯ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಶಾಸಕರು ಭಾಗಿಯಾಗಿದ್ದಾರೆ.
ಇತ್ತೀಚೆಗೆ ಬಿಜೆಪಿಯಲ್ಲಿ ರೆಬೆಲ್ ಹೇಳಿಕೆ ನೀಡಿ ಸುದ್ದಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಸಭೆಗೆ ಹಾಜರಾಗಿದ್ದು, ಸಿಎಂ ಎದುರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರ ಸಮ್ಮುಖದಲ್ಲೇ ಸಿಎಂ ಯಡಿಯೂರಪ್ಪ ಶಾಸಕರ ಸಮಸ್ಯೆಗಳು, ದೂರುಗಳು, ಸಲಹೆಗಳ ಕುರಿತು ಸಮಾಲೋಚಿಸುತ್ತಿದ್ದಾರೆ.
ಇಂದಿನ ಶಾಸಕರ ಸಭೆಯಲ್ಲಿ ಶಾಸಕ ಯತ್ನಾಳ್ ಎಲ್ಲರ ಕೇಂದ್ರ ಬಿಂದುವಾಗಿದ್ದು, ಅವರು ಏನೆಲ್ಲಾ ದೂರು, ಅಸಮಾಧಾನಗಳನ್ನು ಸಿಎಂ ಮುಂದೆ ಹೇಳಲಿದ್ದಾರೆ, ಯಾವ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಿದ್ದಾರೆ ಎನ್ನುವ ಕುತೂಹಲ ಬಿಜೆಪಿ ಪಾಳಯದಲ್ಲಿ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಪ್ರಾಣಿ ಹಿಂಸೆ ತಡೆ ಕಾಯ್ದೆ ಮಾರ್ಪಾಡಿಗೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ