ದಾವೋಸ್/ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶವು ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಅಧಿಕೃತ ದಿನಾಂಕವನ್ನು ದಾವೋಸ್ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜಾಗತಿಕ ಹೂಡಿಕೆದಾರರ ಶೃಂಗಸಭೆ 2020 (ಆವಿಷ್ಕಾರ ಈಗ – ಅಭಿವೃದ್ದಿ ನಿರಂತರ) ಕರ್ಟನ್ ರೈಸರ್ ಅನ್ನು ದಾವೋಸ್ ನಲ್ಲಿ ಬುಧವಾರ ರಾತ್ರಿ ನೆರವೇರಿಸಿದರು.
ಶೃಂಗಸಭೆ ಪೂರ್ವಭಾವಿ ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೋದ್ಯಮಿಗಳು, ಉದ್ಯಮಿಗಳು ಮತ್ತು ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಜಾಗತಿಕ ವಾಣಿಜ್ಯೋದ್ಯಮಿಗಳನ್ನ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ ರಮಣ ರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಸಿಐಐ ನ ಡೈರೆಕ್ಟರ್ ಜನರಲ್ ಚಂದ್ರಜೀತ್ ಬ್ಯಾನರ್ಜಿ, ಭಾರತ್ ಫೋರ್ಜ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಾಬಾ ಕಲ್ಯಾಣಿ, ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ಎಂಡಿ ಶ್ರೀ ವಿಕ್ರಮ್ ಕಿರ್ಲೋಸ್ಕರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.