ಬೆಂಗಳೂರು: ಆಗಸ್ಟ್ 21 ರಂದು ವಿಜಯಪುರ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಆಲಮಟ್ಟಿ ಅಣೆಕಟ್ಟೆಗೆ ಬಾಗಿನ ಅರ್ಪಿಸಲಿದ್ದಾರೆ. ನಂತರ ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಹಾಗು ನೆರೆ ಹಾನಿ ಪರಿಹಾರ ಕಾರ್ಯಾಚರಣೆ ಕುರಿತು ಸಭೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 8 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ, 11 ಗಂಟೆಗೆ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿದೆ. ನಂತರ ವಿಜಯಪುರ ಜಿಲ್ಲೆಯ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಕೊರೊನಾ ನಿಯಂತ್ರಣ ಕುರಿತು ಕೆಲಕಾಲ ಚರ್ಚಿಸುವರು.
ಇದನ್ನೂ ಓದಿ: ಪಂಚಮಸಾಲಿ ಶ್ರೀಗಳ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ!
ಅಂದು ಮಧ್ಯಾಹ್ನ 1 ಗಂಟೆಗೆ ಆಲಮಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಪ್ರಯಾಣಿಸಲಿದ್ದು, 2:30ಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಜಿಲ್ಲಾ ಕೋವಿಡ್ ನಿಯಂತ್ರಣ ಹಾಗೂ ನೆರೆ ಹಾನಿ ಸಂಬಂಧ ಕೈಗೊಂಡ ಪರಿಹಾರ ಕ್ರಮಗಳ ಕುರಿತಂತೆ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 7:20ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಡಲಿರುವ ಮುಖ್ಯಮಂತ್ರಿ, 8:50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.