ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ಡೌನ್ 3.O ಜಾರಿ ಮಾಡಿದ ನಂತರ ಗ್ರಾಮೀಣ ಭಾಗಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದು, ಸೋಂಕು ಹೆಚ್ಚಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಡಿಯೋ ಸಂವಾದ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ಕಾಣಿಸಿಕೊಂಡಿರುವ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜೊತೆ ಸಿಎಂ ಮಾತುಕತೆ ನಡೆಸಲಿದ್ದಾರೆ.
ಸೋಂಕಿತರ ಸಂಖ್ಯೆ ಹೆಚ್ಚಾದ ನಂತರ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳು, ಮೈಕ್ರೋ ಕಂಟೈನ್ಮೆಂಟ್ ಝೋನ್ ರಚನೆ, ಮಾಸ್ ರೀತಿಯ ಕೋವಿಡ್ ಪರೀಕ್ಷೆ ಮಾಡಿಸುವುದು, ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ಕಳಿಸುವುದು, ಲಾಕ್ಡೌನ್ ಸಮಯದಲ್ಲಿ ಅನಗತ್ಯವಾಗಿ ಜನ ಸಂಚಾರಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳುವುದು, ಊರಿಂದ ಊರಿಗೆ ಅನಾವಶ್ಯಕ ಓಡಾಟಕ್ಕೆ ನಿರ್ಬಂಧ ವಿಧಿಸಿರುವುದು ಸೇರಿದಂತೆ ಇತರ ಕ್ರಮಗಳ ಕುರಿತು ಸಿಎಂ ಮಾಹಿತಿ ಪಡೆದುಕೊಳ್ಳಲಿದ್ದಾರೆ.