ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ ಮೊದಲ ಬಾರಿ ಸಮಗ್ರ ತನಿಖೆ ಮಾಡುತ್ತಿದ್ದೇವೆ. ಈಗಾಗಲೇ ಕೆಲವರ ಬಣ್ಣ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಹಿಂದಿನ ಸರ್ಕಾರಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದವು. ಆದರೆ ಈ ಬಾರಿ ನಾವು ಡ್ರಗ್ಸ್ ದಂಧೆ ಪ್ರಕರಣ ಕುರಿತು ಸಮಗ್ರವಾಗಿ ತನಿಖೆ ಮಾಡಿಸುತ್ತಿದ್ದೇವೆ. ಇದರಿಂದಾಗಿ ಅನೇಕ ಜನರ ಬಣ್ಣ ಬಯಲಾಗುತ್ತಿದೆ. ಈ ಪ್ರಕರಣದಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಹಾಗೂ ಮಳೆ ಹಾನಿ ಬಗ್ಗೆ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ಚರ್ಚೆ ನಡೆಸಿದ್ದೇನೆ. ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 10 ರಿಂದ 30 ಕೋಟಿ ರೂ. ಹಣ ಇದೆ. ಹಣದ ಕೊರತೆ ಇಲ್ಲ ಎನ್ನುವುದು ಸಮಾಧಾನದ ಸಂಗತಿ. ಜಿಲ್ಲೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಕೊರತೆಯಿಲ್ಲದಿರುವುದು ಕೂಡ ಸಮಾಧಾನದ ವಿಷಯ. ಆಕ್ಸಿಜನ್ ಕೊರತೆ ಇದ್ದರೆ ತಿಳಿಸುವಂತೆ ಮತ್ತು ಸೋಂಕು ಹರಡುವ ಪ್ರದೇಶಗಳನ್ನು ಗುರುತಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಪಿಜಿ ವೈದ್ಯಕೀಯ ವಿದ್ಯಾರ್ಥಿಗಳ ಕೌನ್ಸಲಿಂಗ್ ಮುಗಿದಿದೆ. ಎರಡು ದಿನಗಳಲ್ಲಿ 900ಕ್ಕೂ ಹೆಚ್ಚು ತಜ್ಞವೈದ್ಯರನ್ನು ಅಗತ್ಯ ಜಿಲ್ಲೆಗಳಲ್ಲಿ ನಿಯೋಜಿಸುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಕೊರೊನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಕಳೆದ 15 ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಕೊರೊನಾ ಸೋಂಕಿನ ಪ್ರಮಾಣ ಕೂಡ ಕಡಿಮೆಯಾಗುತ್ತಿದೆ. ಇನ್ನಷ್ಟು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಅದಕ್ಕಾಗಿ ಕೊರೊನಾ ಪರೀಕ್ಷೆ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಮನೆ ಮನೆ ಸರ್ವೆ ಮಾಡಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ 8,071 ಕೋಟಿ ರೂ.ಗಳಷ್ಟು ಹಾನಿ ಸಂಭವಿಸಿದೆ. ಹಾನಿ ಕುರಿತು ಕೇಂದ್ರ ತಂಡ ಪರಿಶೀಲನೆ ನಡೆಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆ ಇಂದು ಸಂಜೆ ಕೇಂದ್ರದ ತಂಡ ಚರ್ಚೆ ನಡೆಸಲಿದೆ. ಆದಷ್ಟು ಬೇಗ ನಾನು ದೆಹಲಿಗೆ ತೆರಳಿ ಪರಿಹಾರ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇನೆ. ಸಂಬಂಧಿಸಿದವರ ಜೊತೆ ಮಾತುಕತೆ ನಡೆಸಿ ಪರಿಹಾರ ಪಡೆಯುವ ಕೆಲಸ ಮಾಡುತ್ತೇನೆ ಎಂದು ಸಿಎಂ ವಿವರಿಸಿದರು.
ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧರಿಸಲಾಗಿದೆ. ಇಂದು ಸಂಜೆಯೊಳಗೆ ಚರ್ಚೆ ನಡೆಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.