ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪು ಹಿನ್ನೆಲೆ ಸಿಎಂ ಯಡಿಯೂರಪ್ಪ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಶೀಘ್ರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿಟ್ಟಿನಲ್ಲಿ ಸಿಎಂ ಮಹದಾಯಿ ವಿಚಾರದ ಉಸ್ತುವಾರಿ ವಹಿಸಿರುವ ಸಚಿವ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದರು. ಮುಂದಿನ ಪ್ರಕ್ರಿಯೆಗಳ ಬಗ್ಗೆ ಧವಳಗಿರಿ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಜುಲೈ 15ರಿಂದ ಮಹದಾಯಿ ವಿವಾದ ಸಂಬಂಧ ಅಂತಿಮ ವಿಚಾರಣೆ ಇದ್ದು, ಯಾವ ರೀತಿ ಹೆಚ್ಚುವರಿ ನೀರು ಹಂಚಿಕೆಗೆ ವಾದ ಮಂಡಿಸಬೇಕು ಎಂಬ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ.
ಇದೇ ವೇಳೆ ಮೊದಲ ಕಾನೂನು ಕಂಠಕ ನಿವಾರಣೆಯಾಗಿದ್ದು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಕಳಸಾ ಬಂಡೂರಿ ನಾಲೆ ಕಾಮಗಾರಿ ಕೈಗೊಳ್ಳುವ ಬಗ್ಗೆನೂ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಇದೀಗ ಶೀಘ್ರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೇಂದ್ರಕ್ಕೆ ಒತ್ತಡ ತರುವ ಬಗ್ಗೆ ಮೊದಲ ಆದ್ಯತೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಒತ್ತಡ ತರುವ ಬಗ್ಗೆ ಚಿಂತಿಸಲಾಗಿದೆ. ಈ ಸಂಬಂಧ ಅಧಿಕಾರಿಗಳ ಜತೆಗೂ ಸಿಎಂ ಚರ್ಚೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.