ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಯಾ ಜಿಲ್ಲಾಡಳಿತಗಳು ತುರ್ತು ಪರಿಹಾರ ಕಾರ್ಯ ಕೈಗೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ, ಶೀಘ್ರವೇ ಪುನರ್ವಸತಿ ಕೆಲಸಗಳನ್ನು ಯುದ್ದೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಿಂದ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳೊಂದಿಗೆ ನಡೆಸಿದ ತುರ್ತು ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದ್ದಾರೆ.
ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸುಮಾರು ಎರಡು ತಾಸುಗಳ ಕಾಲ ಚರ್ಚೆ ನಡೆಸಿದರು. ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಹಲವು ಸಲಹೆ ಸೂಚನೆಗಳನ್ನು ನೀಡಿದರು. ಮಳೆಯ ಆರ್ಭಟಕ್ಕೆ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡು ಗ್ರಾಮಗಳು ನಡುಗಡ್ಡೆಗಳಾಗಿ ಮಾರ್ಪಟ್ಟಿವೆ. ಅಲ್ಲಿ ಸಿಲುಕಿಕೊಂಡಿರುವ ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ಯಬೇಕು. ಜಿಲ್ಲಾಧಿಕಾರಿಗಳು ಆಹಾರ, ವಸ್ತ್ರಗಳು, ಹೊದಿಕೆ ಇತ್ಯಾದಿ ಸೌಕರ್ಯಗಳನ್ನು ನಿರಾಶ್ರಿತರಿಗೆ ಒದಗಿವುದರ ಜತೆ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಇನ್ನು, ಎನ್‍ಡಿಆರ್‍ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ), ಎಸ್‍ಡಿಆರ್‍ಎಫ್ (ರಾಜ್ಯ ವಿಪತ್ತು ನಿರ್ವಹಣಾ ತಂಡ), ಸೇನೆ, ಮತ್ತಿತರ ಪಡೆಗಳ ಸಹಾಯ ಪಡೆದುಕೊಂಡು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸಿ. ಎನ್‍ಡಿಆರ್‍ಎಫ್ ನಿಂದ 3 ತಂಡಗಳು ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ತಂಡಗಳನ್ನು ನಿಯೋಜಿಸಿಕೊಳ್ಳಿ. ಸೇನೆ ಹಾಗೂ ಎಸ್ಡಿರ್ಎಫ್ ಸೇವೆಯನ್ನು ಕೂಡ ಬಳಸಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ರು.
ಅಗ್ನಿಶಾಮಕ ದಳ, ಪೊಲೀಸ್, ಕಂದಾಯ ಮತ್ತಿತರ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಅಹೋರಾತ್ರಿ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಪುನರ್ವಸತಿ ಕೇಂದ್ರಗಳಲ್ಲಿ ಉತ್ತಮ ಆಹಾರ, ಶುದ್ಧ ಕುಡಿಯುವ ನೀರು, ಹಾಲು ಮತ್ತಿತರ ತುರ್ತು ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು. ನಮ್ಮ ರಾಜ್ಯದ ವ್ಯಾಪ್ತಿಯ ಕೃಷ್ಣಾ ನದಿ ತೀರದ ಗ್ರಾಮಗಳು ಹಾಗೂ ಕೃಷಿ ಜಮೀನುಗಳು ಮುಳುಗಡೆ ಆಗಿವೆ. ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದು ಅಗತ್ಯ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 11.42 ಕೋಟಿ ರೂ. , ವಿಜಯಪುರ ಜಿಲ್ಲೆಯಲ್ಲಿ ಪಿ.ಡಿ. ಖಾತೆಯಲ್ಲಿ 9.10 ಕೋಟಿ ರೂ. , ಬಾಗಲಕೋಟೆ ಜಿಲ್ಲೆಯಲ್ಲಿ ಪಿ.ಡಿ. ಖಾತೆಯಲ್ಲಿ 10.55 ಕೋಟಿ ರೂ. , ರಾಯಚೂರು ಜಿಲ್ಲೆಯಲ್ಲಿ ಪಿ.ಡಿ. ಖಾತೆಯಲ್ಲಿ 13.02 ಕೋಟಿ ರೂ. ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಪಿ.ಡಿ. ಖಾತೆಯಲ್ಲಿ 10.29 ಕೋಟಿ ರೂ. ಅನುದಾನ ಲಭ್ಯವಿದೆ. ಅದನ್ನು ಜಿಲ್ಲೆಗಳ ತುರ್ತು ಅವಶ್ಯಕತೆಗೆ ಬಳಸಿಕೊಳ್ಳಿ ಎಂದು ಯಡಿಯೂರಪ್ಪ ಸೂಚಿಸಿದರು.
ವೈಮಾನಿಕ ಸಮೀಕ್ಷೆ: ನಾಳೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿನ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಯಾದಗಿರಿ, ರಾಯಚೂರು ಬಾಗಲಕೋಟೆ ವಿಜಯಪುರ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ಹವಮಾನ ಪರಿಸ್ಥಿತಿ ನೋಡಿ ಬೆಳಗಾವಿಯಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು ಅವರು ಇದೇ ವೇಳೆ ತಿಳಿಸಿದ್ದಾರೆ.