ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ವಿಚಾರ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎನ್ನಲಾಗುತ್ತಿದೆ.
ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಂತೆ ಚರ್ಚೆ ನಡೆದಿದ್ದು, ಅವಧಿ ಮುಕ್ತಾಯಗೊಂಡ ಬಳಿಕ ಮತ್ತೊಮ್ಮೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಚುನಾವಣೆ ನಡೆಸುವ ಸಂಬಂಧ ಈಗಾಗಲೇ ರಾಜ್ಯ ಚುನಾವಣಾ ಆಯೋಗ ಡಿಸಿಗಳಿಂದ ಅಭಿಪ್ರಾಯ ಕೇಳಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ವರದಿ ಬಂದ ನಂತರ ಚರ್ಚಿಸಿ ತೀರ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಈ ಸಂಬಂಧ ಕಾನೂನಾತ್ಮಕ ಬೆಳವಣಿಗೆಗಳ ಬಗ್ಗೆ ಗಮನಿಸಲು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿಗೆ ಜವಾಬ್ದಾರಿ ವಹಿಸಲಾಗಿದೆ ಎನ್ನಲಾಗುತ್ತಿದೆ.
ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಕಾನೂನು ಸಚಿವ ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಾಲ್ಗೊಂಡಿದ್ದರು.