ಬೆಂಗಳೂರು: ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಸಂಜೆ ರೈಲಿನಲ್ಲಿ ಯಾದಗಿರಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು ಸಂಜೆ 7.20 ಕ್ಕೆ ಸಿಎಂ ಕುಮಾರಸ್ವಾಮಿ ಕಂಟೋನ್ಮೆಂಟ್ ನಿಲ್ದಾಣದಿಂದ ಯಾದಗಿರಿಗೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ತೆರಳಿದರು. ಇದಕ್ಕೂ ಮುನ್ನ ಅವರು ರೈಲ್ವೇ ನಿಲ್ದಾಣದಲ್ಲಿ ವಿಕಲಚೇತನ ವ್ಯಕ್ತಿಯನ್ನು ಕಂಡು ಯೋಗಕ್ಷೇಮ ವಿಚಾರಿಸಿದರು. ನಾಳೆಯಿಂದ ಮೂರು ದಿನಗಳ ಕಾಲ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಸಿಎಂ, ತಮ್ಮ ಮೊದಲ ಗ್ರಾಮ ವಾಸ್ತವ್ಯವನ್ನು ಗುರುಮಿಟ್ಕಲ್ ತಾಲೂಕಿನ ಚಂಡರಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯ ಮಾಡುವ ವೇಳೆ ಈ ಗ್ರಾಮದಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೂ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜೂನ್ 22 ರಂದು ಬೆಳಗ್ಗೆ ಚಂಡರಕಿ ಗ್ರಾಮದಿಂದ ಕಲಬುರಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನ ಹೆರೂರು ಗ್ರಾಮಕ್ಕೆ ಭೇಟಿ ನೀಡಲಿದ್ದು, ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಮ್ಮ ಎರಡನೇ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಲ್ಲೂ ಸಹ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಜನತಾದರ್ಶನ ನಡೆಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ ಅವರು ರೈತರಿಗೆ ಮಾಹಿತಿ ನೀಡುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜೂನ್ 23 ರಂದು ಬೆಳಗ್ಗೆ ಕಲಬುರಗಿಗೆ ಆಗಮಿಸುವ ಸಿಎಂ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.