ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ. ಈ ಬಗ್ಗೆ ಮಾರ್ಚ್ 23 ಹಾಗೂ 31ರಂದು ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಯೇ ಚುನಾವಣೆ ನಡೆಸುವ ಕುರಿತು ಚರ್ಚಿಸಲಾಗಿತ್ತು.
ಅದರಂತೆ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಈ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಅಧ್ಯಯನ ನಡೆಸಿ, ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿದೆ.
ಇದನ್ನೂ ಓದಿ: 'ಸಿದ್ದಹಸ್ತ'ರೊಬ್ಬರು ಬಿಡಿಎ 'ರೀಡೂ ಋಣ'ದ ತಿಂಮಿಗಿಲವನ್ನೇ ಕೆಪಿಎಸ್ಸಿಯಲ್ಲಿ ಕೂರಿಸಿದ್ದರು': ಹೆಚ್ಡಿಕೆ