ಬೆಂಗಳೂರು: ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯರಲ್ಲಿ ಪೈಪೋಟಿ ಏರ್ಪಟ್ಟಿದೆ. ಈ ಕುರಿತು ಪಕ್ಷದ ಸ್ಥಳೀಯ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದೇ ನಿಟ್ಟಿನಲ್ಲಿ ಒಮ್ಮತ ಮೂಡಿಸುವ ಸಲುವಾಗಿ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಸಭೆ ಕರೆದಿದ್ದರು. ಈ ಸಭೆಯಲ್ಲಿ ಹಾವೇರಿ ಜಿಲ್ಲೆಯ ಹಲವು ಮುಖಂಡರು ಪಾಲ್ಗೊಂಡಿದ್ದರು.
ಈ ಸಂದರ್ಭ ಸುದೀರ್ಘ ಚರ್ಚೆ ನಡೆಸಿರುವ ಡಿಕೆಶಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧ್ಯಕ್ಷ ಪಟ್ಟ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಅಲ್ಲದೆ ಪಕ್ಷಕ್ಕೆ ನಿಷ್ಠರಾಗಿರುವ ಎಲ್ಲರಿಗೂ ಅವಕಾಶ ಸಿಗಲಿದೆ. ಈಗ ಅವಕಾಶ ಸಿಗದವರು ಮುಂದೆ ಅವಕಾಶ ಪಡೆಯುತ್ತೀರಿ. ತಾಳ್ಮೆ ಇರಲಿ, ಪಕ್ಷ ಸಂಘಟನೆಯತ್ತ ಹೆಚ್ಚು ಗಮನಹರಿಸಿ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಒಮ್ಮತದ ಅಭ್ಯರ್ಥಿ ಆಯ್ಕೆಯನ್ನು ಮಾಡೋಣ. ನ.3 ಕ್ಕೆ ರಾಜ್ಯದ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯಲಿದೆ. ಸದ್ಯ ಪ್ರಚಾರಕಾರ್ಯದಲ್ಲಿ ನಿರತರಾಗಿರುವ ಹಿನ್ನೆಲೆ ಚುನಾವಣೆ ಬಳಿಕ ಸೂಕ್ತ ವ್ಯಕ್ತಿಯ ಆಯ್ಕೆ ಮಾಡೋಣ ಎಂದರು.
ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನ:
ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಬಸವರಾಜ್ ದೇಸಾಯಿ ಕೊರೊನಾ ಸೋಂಕಿನಿಂದ ನಿಧನ ಹೊಂದಿರುವುದರಿಂದ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನ ಖಾಲಿಯಾಗಿದ್ದು, ಆ ಸ್ಥಾನಕ್ಕೆ ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಪುತ್ರ ಹಾಗೂ ಅಕ್ಕಿವಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ತಹಸೀಲ್ದಾರ್ ಮತ್ತು ಗುಡಗೂರು ಜಿಲ್ಲಾ ಪಂಚಾಯಿತಿ ಸದಸ್ಯ ಏಕನಾಥ ಬಾನುವಳ್ಳಿ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿದೆ.
ಏಕನಾಥ ಬಾನುವಳ್ಳಿ ಬೆನ್ನಿಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಹಾಗೂ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ನಿಂತಿದ್ದಾರೆ ಎನ್ನಲಾಗಿದ್ದು, ರಾಘವೇಂದ್ರ ತಹಸೀಲ್ದಾರ್ ಪರವಾಗಿ ವಿರೋಧ ಪಕ್ಷದ ನಾಯಕರಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ ಇಂದು ಹಾವೇರಿ ಪಕ್ಷದ ಜಿಲ್ಲಾ ಮುಖಂಡರ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ 34 ಸದಸ್ಯರಿದ್ದು, ಕಾಂಗ್ರೆಸ್‍ನ 22 ಹಾಗೂ ಬಿಜೆಪಿಯ 12 ಸದಸ್ಯರಿದ್ದಾರೆ. ಕಾಂಗ್ರೆಸ್‍ಗೆ ಸ್ಪಷ್ಟ ಬಹುಮತ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 22 ರಂದು ಚುನಾವಣೆ ಘೋಷಣೆಯಾಗಿರುವುದರಿಂದ ಇಂದು ನಡೆಯುವ ಸಭೆಯಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎನ್ನುವುದು ಸ್ಪಷ್ಟವಾಗಲಿದೆ.