ಬೆಂಗಳೂರು: ಚುನಾವಣೆಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯ್ ವಾಲಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಸಚಿವ ನಾರಾಯಣಗೌಡ ಕೆಆರ್ ಪೇಟೆ ಚುನಾವಣೆಯಲ್ಲಿ ತಮ್ಮ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಈ ಕುರಿತು ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡುವಂತೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜನವರಿ 13ರಂದು ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಸಚಿವ ನಾರಾಯಣಗೌಡರು 2013 ಹಾಗೂ 2018ರ ಚುನಾವಣೆ, ಉಪಚುನಾವಣೆ ವೇಳೆ ಲೋಕಾಯುಕ್ತರಿಗೆ ಸಲ್ಲಿಸುವ ಆಸ್ತಿ ವಿವರಗಳ ಪ್ರಮಾಣಪತ್ರಗಳಲ್ಲಿ ಸಾಕಷ್ಟು ಲೋಪಗಳಿವೆ. ಕೆಲ ಆಸ್ತಿಯ ವಿವರಗಳನ್ನು ಮುಚ್ಚಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಅವರ ಮನವಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ದೂರುದಾರರ ದೂರನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಅವರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಸಚಿವರ ಕಚೇರಿ ಸ್ಪಷ್ಟನೆ:
ಸಚಿವ ಡಾ. ನಾರಾಯಣಗೌಡ ಅವರ ವಿರುದ್ಧ ದಿನೇಶ್ ಕಲ್ಲಳ್ಳಿ ಎಂಬುವವರು ರಾಜ್ಯಪಾಲರಿಗೆ ಖಾಸಗಿ ದೂರು ನೀಡಿದ್ದು, ಅದನ್ನು ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುಂದಿನ ಕ್ರಮಕ್ಕಾಗಿ ಎಂದು ವರ್ಗಾಯಿಸಿದ್ದಾರೆ. ಹಾಗಾಗಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಎಂದು ತಪ್ಪು ಮಾಹಿತಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದ್ದು ಎಂದು ಸಚಿವರ ಕಚೇರಿ ಸ್ಪಷ್ಟನೆ ನೀಡಿದೆ.