ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದೊಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ರಾಮಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ (ಪಿಎಂಎಲ್ಎ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಆರೋಪಿ ಬಿನೀಶ್ ಕೊಡಿಯೇರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಮ್ ಜಿ ಉಮಾ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿ ಹೊರಡಿಸಿದೆ. ಬಿನೀಶ್ ಕೊಡಿಯೇರಿಯನ್ನು 2020ರ ಅಕ್ಟೋಬರ್ 29ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣವೇನು?:
ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತನಾಗಿರುವ ಮಹಮ್ಮದ್ ಅನೂಪ್ ಜತೆ ಹಣಕಾಸು ವಹಿವಾಟು ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಅಧಿಕಾರಿಗಳು ಬಿನೀಶ್ ಕೊಡಿಯೇರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಈ ವೇಳೆ ಶೆಲ್ ಕಂಪನಿ (ನಕಲಿ ಸಂಸ್ಥೆ) ಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಿಎಂಎಲ್ಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ವಿಚಾರಣೆ ವೇಳೆ ಹಲವು ಶೆಲ್ ಕಂಪನಿಗಳ ಮೂಲಕ ವಿದೇಶಗಳಿಗೆ ಹಣ ರವಾನಿಸಿದ ಅಂಶಗಳು ಬೆಳಕಿಗೆ ಬಂದಿವೆ ಎಂದು ಇಡಿ ಆರೋಪಿಸಿ, ನಗರದ 34 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಬಿನೀಶ್ಗೆ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ನಂತರ ಬಿನೀಶ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಕೊಡಿಯೇರಿ ಬಾಲಕೃಷ್ಣ ಪುತ್ರನ ಮುಖವಾಡ!