ಬೆಂಗಳೂರು : ಶಾಸಕ ಬಿ ನಾರಾಯಣರಾವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವ ಸುರ್ಜೆವಾಲಾ, ಬಸವಕಲ್ಯಾಣ ಶಾಸಕರಾದ ಬಿ. ನಾರಾಯಣರಾವ್ ಅವರು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ವರ್ಗಕ್ಕೆ ನನ್ನ ಅತೀವ ಸಂತಾಪಗಳು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡರ ಸಂತಾಪ: ಶಾಸಕರ ಅಗಲಿಕೆಗೆ ಸಂತಾಪ ಸೂಚಿಸಿರುವ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಶರಣರ ನಾಡು ಬಸವ ಕಲ್ಯಾಣ ಕ್ಷೇತ್ರದ ಶಾಸಕರಾದ ನಾರಾಯಣರಾವ್ ಅವರ ನಿಧನದಿಂದ ನನಗೆ ವೈಯಕ್ತಿಕತವಾಗಿ ಅತೀವ ದುಃಖವಾಗಿದೆ. ತಮ್ಮ ಸರಳತೆ ಹಾಗೂ ಮಾನವೀಯ ಮೌಲ್ಯಗಳಿಂದ ಕೆಲವೇ ದಿನಗಳಲ್ಲಿ ಜನರಿಂದ ಅಪಾರ ಪ್ರೀತಿ ಮತ್ತು ಅಭಿಮಾನ ಗಳಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕೋಲಿ ಸಮಾಜದ ಧ್ವನಿಯಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ನಲ್ಲಿ, ಬಸವ ಕಲ್ಯಾಣ ಶಾಸಕರಾದ ನಾರಾಯಣರಾವ್ ಕೊರೊನಾ ಸೋಂಕಿನಿಂದ ಮೃತಪಟ್ಟ ಸುದ್ದಿ ಆಘಾತ ತಂದಿದೆ. ನಿನ್ನೆಯಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾದಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ನಾರಾಯಣ ರಾವ್ ಅವರ ಸಾವು ಮನಸ್ಸನ್ನು ಕಂಗೆಡಿಸಿದೆ. ಮೃತರ ಆತ್ಮಕ್ಕೆ ಆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥಿಸಿಕೊಳ್ಳುತ್ತೇನೆ ಎಂದಿದ್ದಾರೆ.
ಮಾಜಿ ಸಚಿವ ಹೆಚ್.ಕೆ. ಪಾಟೀಲ್ ತಮ್ಮ ಟ್ವೀಟ್ನಲ್ಲಿ, ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ನಾರಾಯಣರಾವ್ ಅವರ ಅಕಾಲಿಕ ನಿಧನಕ್ಕೆ ವಿಷಾದ ವ್ಯಕ್ತಪಡಿಸುವೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸೋಣ ಎಂದಿದ್ದಾರೆ. ರಾಜ್ಯಸಭೆಯ ಸದಸ್ಯರು ಸಿ ಚಂದ್ರಶೇಖರ್, ಮಾಜಿ ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಗಣ್ಯರು ಶಾಸಕರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.